ಶ್ರೀನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಘೋಷಿಸಿದ್ದಾರೆ.
ಇತರ ಯಾವುದೇ ವಿರೋಧ ಪಕ್ಷಗಳೊಂದಿಗೆ ಯಾವುದೇ ಮೈತ್ರಿ ಮಾಡಿಕೊಳ್ಳಲ್ಲ, ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಹೇಳಿದರು. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಎಎಪಿ ನಂತರ ಲೋಕಸಭಾ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಮೂರನೇ ಪಕ್ಷ ನ್ಯಾಷನಲ್ ಕಾನ್ಫರೆನ್ಸ್ ಆಗಿದೆ. ಈ ಮೂಲಕ ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಹಿನ್ನಡೆಯಾಗಿದೆ.
“ಸೀಟು ಹಂಚಿಕೆ ವ್ಯವಸ್ಥೆಗೆ ಸಂಬಂಧಿಸಿದಂತೆ, ನ್ಯಾಷನಲ್ ಕಾನ್ಫರೆನ್ಸ್ (ಲೋಕಸಭಾ) ಚುನಾವಣೆಯಲ್ಲಿ ತನ್ನ ಸ್ವಂತ ಬಲದ ಮೇಲೆ ಸ್ಪರ್ಧಿಸಲಿದೆ ಎಂದು ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಈ ಬಗ್ಗೆ ಎರಡು ಮಾತಿಲ್ಲ, ಈ ಬಗ್ಗೆ ಇನ್ನು ಮುಂದೆ ಯಾವುದೇ ಪ್ರಶ್ನೆಗಳು ಇರಬಾರದು” ಎಂದು ಅಬ್ದುಲ್ಲಾ ಸುದ್ದಿಗಾರರಿಗೆ ತಿಳಿಸಿದರು.