ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ, ನಟಿ, ಅಪರ್ಣಾ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿ ಗಣ್ಯರು ಸಂತಾಪ ಸೂಚಿಸಿದ್ದಾರೆ.
ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.