ಬೆಂಗಳೂರು: ಕ್ರೌರ್ಯದ ಆಧಾರದಲ್ಲಿ ಪತಿ ಮೊದಲ ಬಾರಿ ಸಲ್ಲಿಸಿದ್ದ ವಿವಾಹ ವಿಚ್ಛೇದನ ಅರ್ಜಿ ತಿರಸ್ಕೃತವಾಗಿದ್ದಲ್ಲಿ ಎರಡನೇ ಬಾರಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ಎರಡನೇ ಬಾರಿ ಅರ್ಜಿ ಸಲ್ಲಿಸಲು ಕಾನೂನಿನಲ್ಲಿ ಯಾವುದೇ ಅಡ್ಡಿ ಇಲ್ಲವೆಂದು ಹೈಕೋರ್ಟ್ ಸ್ಪಷ್ಟನೆ ನೀಡಿದ್ದು, ಪತಿಯೊಬ್ಬ ತನ್ನ ಮೊದಲನೇ ಮದುವೆ ವಿಚ್ಛೇದನದ ಅರ್ಜಿ ತಿರಸ್ಕೃತಗೊಂಡ ನಂತರ ಸಲ್ಲಿಸಿದ ಎರಡನೇ ಅರ್ಜಿಯನ್ನು ನ್ಯಾಯಪೀಠ ಪುರಸ್ಕರಿಸಿದೆ.
ಅಲ್ಲದೇ, ವಿಚ್ಛೇದನ ಅರ್ಜಿ ತಿರಸ್ಕರಿಸಿದ್ದ ಮೈಸೂರಿನ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿ ವಿಚ್ಛೇದನ ಮಂಜೂರು ಮಾಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಅನುಸಿವರಾಮನ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ಪೀಠ ಪತಿ ಸಲ್ಲಿಸಿದ ಮೇಲ್ಮನವಿ ಆಲಿಸಿದೆ.
ಒಂದು ವೇಳೆ ಪತಿ ತನ್ನ ಮಗನಿಗಾಗಿ ಕಾನೂನು ಬದ್ಧವಾಗಿ ನಿರ್ವಹಿಸಬೇಕಿರುವ ಕರ್ತವ್ಯಗಳನ್ನು ಪಾಲಿಸದಿದ್ದರೂ ಆತ ತನ್ನ ವಿರುದ್ಧ ಪತ್ನಿಯ ಮಾನಸಿಕ ಕ್ರೌರ್ಯ ಸಾಬೀತುಪಡಿಸಿದರೆ ಸಾಕು, ಆತನಿಗೆ ವಿವಾಹ ವಿಚ್ಛೇದನ ಮಂಜೂರು ಮಾಡಬೇಕಾಗುತ್ತದೆ ಎಂದು ತಿಳಿಸಿದೆ.