ನಾನು ಯಾವುದೇ ಕಾರಣಕ್ಕೂ ಬಿಜೆಪಿ ತೊರೆಯುವುದಿಲ್ಲ ಎಂದು ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ತಿಳಿಸಿದ್ದಾರೆ.
ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತನಾಗಿದ್ದೇನೆ. ನಾನು ಪಕ್ಷವನ್ನು ತೊರೆಯುತ್ತೇನೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿಕೆ ನೀಡಿದ್ದಾರೆ.
ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಸಂದರ್ಭದಲ್ಲಿ ಸಿಎಂ ಸ್ಥಾನಕ್ಕೆ ಅರವಿಂದ ಬೆಲ್ಲದ ಅವರ ಹೆಸರು ಕೂಡ ಕೇಳಿಬಂದಿತ್ತು. ಬಿ.ಎಸ್.ವೈ. ಬಳಿಕ ಮುಖ್ಯಮಂತ್ರಿ ಸ್ಥಾನಕ್ಕೇರುವವರ ಸಂಭಾವ್ಯರ ಪಟ್ಟಿಯಲ್ಲಿ ಅವರ ಹೆಸರೂ ಇತ್ತು ಎನ್ನಲಾಗಿತ್ತು.
ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ಶಾಸಕರನ್ನು ಸೆಳೆಯಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಂದಾಗಿದ್ದಾರೆ ಎಂದು ಆರೋಪಿಸಿದ್ದರು. ಅರವಿಂದ ಬೆಲ್ಲದ ಬಿಜೆಪಿ ತೊರೆಯಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು ಎನ್ನಲಾಗಿದ್ದು, ಈ ಕುರಿತಾದ ವದಂತಿಗಳಿಗೆ ತೆರೆ ಎಳೆದ ಬೆಲ್ಲದ್ ಅವರು ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಬಿಜೆಪಿ ತೊರೆಯುವುದಿಲ್ಲ ಎಂದು ಹೇಳಿದ್ದಾರೆ.