ಬೆಂಗಳೂರು: ರಾಜ್ಯದ ವಿವಿಧ ಭಾಗದ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡಿರುವ ಎಲೆ ಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಹುಡುಕಲು ಕೇಂದ್ರ ಸರ್ಕಾರ ತಜ್ಞರ ಸಮಿತಿ ರಚನೆ ಮಾಡಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಕೇಂದ್ರ ಸರ್ಕಾರ ಸಮಿತಿ ರಚನೆ ಮಾಡಿರುವುದನ್ನು ಸ್ವಾಗತಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಕಳೆದ ವಾರ ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಮನವಿಗೆ ತಕ್ಷಣವೇ ಸ್ಪಂದಿಸಿ ತಜ್ಞರ ಸಮಿತಿ ರಚನೆ ಮಾಡಿದೆ. ಇದರಿಂದಾಗಿ ರಾಜ್ಯದಲ್ಲಿ ಅಡಿಕೆ ತೋಟಗಳಲ್ಲಿ ಕಾಣಿಸಿಕೊಂಡ ಎಲೆ ಚುಕ್ಕಿ ರೋಗದ ಬಗ್ಗೆ ತಜ್ಞರು ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಅನುಕೂಲವಾಗಲಿದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ರಾಜ್ಯದ ಸುಮಾರು 20 ಸಾವಿರ ಹೆಕ್ಟೇರ್ ಅಡಿಕೆ ತೋಟಗಳು ಎಲೆ ಚುಕ್ಕಿ ರೋಗದಿಂದ ಬಾಧಿತವಾಗಿದ್ದು, ಇದು ಕಾಳ್ಗಿಚ್ಚಿನಂತೆ ಹರಡುತ್ತಿದೆ. ಮಲೆನಾಡು ಭಾಗದಲ್ಲಿ 50 ಲಕ್ಷ ರೈತರಿಗೆ ಅಡಿಕೆ ಬೆಳೆ ಆರ್ಥಿಕ ಭದ್ರತೆಗೆ ನೆರವಾಗಿದ್ದು, ರೋಗದಿಂದ ಲಕ್ಷಾಂತರ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ ಸಮಿತಿಯಿಂದ ಸಮಸ್ಯೆಗೆ ಪರಿಹಾರ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ರಚಿಸಿದ ತಜ್ಞರ ಸಮಿತಿ ರೋಗದ ಹಾವಳಿಗೆ ಕಾರಣ, ಕ್ರಿಮಿನಾಶಕ ಬಳಸಿದರೂ ನಿಯಂತ್ರಣಕ್ಕೆ ಸಿಗದಿರುವುದು ಸೇರಿದಂತೆ ಎಲ್ಲಾ ರೀತಿಯಲ್ಲಿ ಅಧ್ಯಯನ ನಡೆಸಿ ಪರಿಹಾರ ಕಾರ್ಯತಂತ್ರ ರೂಪಿಸಿಕೊಡಲಿದೆ. ಕಾಸರಗೋಡಿನ ಕೇಂದ್ರೀಯ ತೋಟಗಾರಿಕೆ ಬೆಳೆಗಳ ಸಂಶೋಧನಾ ಸಂಸ್ಥೆ ನಿರ್ದೇಶಕಿ ಡಾ.ಅನಿತಾ ಕರುಣ್ ಸೇರಿದಂತೆ 8 ತಜ್ಞರು ತಂಡದಲ್ಲಿದ್ದಾರೆ.