ನವದೆಹಲಿ: ಫೆ.17ರಿಂದ ದೆಹಲಿಯಲ್ಲಿ ನಡೆಯಲಿರುವ ಬಿಜೆಪಿ ರಾಷ್ಟ್ರೀಯ ಮಂಡಳಿ ಸಭೆಯಲ್ಲಿ ಸುಮಾರು 11,500 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಲೋಕಸಭೆ ಚುನಾವಣೆಗೆ ಮುನ್ನ ಈ ಶನಿವಾರದಿಂದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಸಮಾವೇಶ ನವದೆಹಲಿಯಲ್ಲಿ ನಡೆಯಲಿದೆ. ಕೇಂದ್ರ ಸಚಿವರು, ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ರಾಜ್ಯ ಸಚಿವರು, ರಾಷ್ಟ್ರೀಯ ಮತ್ತು ರಾಜ್ಯ ಪಕ್ಷದ ಪದಾಧಿಕಾರಿಗಳು, ಸಂಸದರು ಮತ್ತು ಶಾಸಕರು ಸೇರಿದಂತೆ ಸುಮಾರು 11,500 ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಗುರುವಾರ ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, ಸಮಾವೇಶದ ಮೊದಲ ದಿನ ಪದಾಧಿಕಾರಿಗಳ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಮಾರೋಪ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಮಾರಂಭದಲ್ಲಿ ಎರಡು ನಿರ್ಣಯ ಕೈಗೊಳ್ಳಲಾಗುವುದು. ಮುಂಬರುವ ಲೋಕಸಭೆ ಚುನಾವಣೆಗೆ ಪಕ್ಷವು ತನ್ನ ಸಿದ್ಧತೆಯ ಬಗ್ಗೆ ವಿವರವಾದ ಚರ್ಚೆ ನಡೆಸಲಿದೆ. ಸಭೆಯಲ್ಲಿ ಸಮಗ್ರ ಸಾಂಸ್ಥಿಕ ಕಾರ್ಯಸೂಚಿಯ ಬಗ್ಗೆ ಚರ್ಚಿಸಲಾಗುವುದು. ವಿಕಸಿತ್ ಭಾರತ್ ವಿಷಯದ ಕುರಿತು ಸಭೆಯ ಸ್ಥಳದಲ್ಲಿ ಪ್ರದರ್ಶನವನ್ನು ಸಹ ಆಯೋಜಿಸಲಾಗುವುದು ಎಂದು ಹೇಳಿದ್ದಾರೆ.