ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಎಫ್ಐಆರ್ ರದ್ದುಗೊಳಿಸುವಂತೆ ಕೋರಿ ಮಾಜಿ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಹೈಕೋರ್ಟ್ ಮೊರೆ ಹೋಗಿದ್ದಾರೆ,
ಸಿದ್ದರಾಮಯ್ಯ ಅವರನ್ನು ಮುಗಿಸಬೇಕು ಎಂದು ಈ ಹಿಂದೆ ಅಶ್ವತ್ಥ್ ನಾರಾಯಣ ವಿವಾದಾತ್ಮಕ ಹೇಳಿಕೆ ನೀಡಿದ್ದು, ಅವರ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಅವರು ಎಫ್ಐ ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ತಮ್ಮ ವಿರುದ್ಧ ಕಪೋಲಕಲ್ಪಿತ ಆರೋಪ ಮಾಡಿ ದೂರು ನೀಡಲಾಗಿದೆ. ನಾನು ಸಿದ್ದರಾಮಯ್ಯ ಅವರನ್ನು ಸೋಲಿಸಬೇಕೆಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದು, ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಅಶ್ವತ್ಥ್ ನಾರಾಯಣ್ ವಿರುದ್ಧ ದೂರು ನೀಡಿದ್ದು ಎಫ್ಐಆರ್ ದಾಖಲಿಸಲಾಗಿದೆ. ನಂತರ ಪ್ರಕರಣವನ್ನು ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.
ಕಳೆದ ಸರ್ಕಾರದಲ್ಲಿ ಸಚಿವರಾಗಿದ್ದ ಅಶ್ವತ್ಥ್ ನಾರಾಯಣ ಮಂಡ್ಯ ಜಿಲ್ಲೆಯ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಟಿಪ್ಪು ಹೊಡೆದು ಹಾಕಿದಂತೆ ಅವರನ್ನು ಹೊಡೆದು ಹಾಕಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು. ನಂತರ ಅವರು ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿ ಕ್ಷಮೆ ಯಾಚಿಸಿದ್ದರು. ಫೆಬ್ರವರಿ 17ರಂದು ಅವರ ವಿರುದ್ಧ ದೂರು ನೀಡಲಾಗಿತ್ತು. ಆದರೆ, ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತ್ತೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ.