ಬೆಂಗಳೂರು: ‘ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರ್ಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು.’
ಹೀಗೆಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ, ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರ್ಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವರು, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.