ಬಳ್ಳಾರಿ : ವಿಮ್ಸ್ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿನ ತುರ್ತುಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದ ರೋಗಿ ಇತ್ತೀಚೆಗೆ ಮರಣ ಹೊಂದಿದ ಸಂಬಂಧ ರೋಗಿಯ ಸಹಾಯಕರು, ಆಸ್ಪತ್ರೆಯ ಮಹಿಳಾ ಗೃಹ ವೈದ್ಯರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.
ವಿಮ್ಸ್ ನಲ್ಲಿ ಆಸ್ಪತ್ರೆಯ ಮಹಿಳಾ ಗೃಹ ವೈದ್ಯರ ಮೇಲೆ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸಿ, ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಪೊಲೀಸ್ ರಕ್ಷಣೆ ನೀಡುವಂತೆ ವಿಮ್ಸ್ ನ ವೈದ್ಯರುಗಳ ತಂಡ ಅಪರ ಜಿಲ್ಲಾಧಿಕಾರಿಗಳಿಗೆ ಬುಧವಾರದಂದು ಮನವಿ ಸಲ್ಲಿಸಿತು.
ಮನವಿ ಸ್ವೀಕರಿಸಿದ ಅಪರ ಜಿಲ್ಲಾಧಿಕಾರಿ ಮಹಮದ್ ಝುಬೇರ್ ಅವರು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗುವುದು, ಅಲ್ಲದೆ ಆಸ್ಪತ್ರೆಯಲ್ಲಿ ಸೂಕ್ತ ಪೊಲೀಸ್ ರಕ್ಷಣೆ ಒದಗಿಸಲಾಗುವುದು. ವೈದ್ಯರು ನಿರ್ಭೀತಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ತಿಳಿಸಿದರು.
ಆಸ್ಪತ್ರೆಗಳಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ಹಲ್ಲೆಯು ಕಾನೂನು ರೀತ್ಯಾ ಅಪರಾಧವಾಗಿದ್ದು, ಈ ರೀತಿಯ ಹಲ್ಲೆ ಪ್ರಕರಣಗಳಿಂದ ವೈದ್ಯರು ತುರ್ತು ಸಂದರ್ಭಗಳಲ್ಲಿ ರೋಗಿಗಳ ಚಿಕಿತ್ಸೆಗೆ ಹಿಂದೇಟು ಹಾಕುವಂತೆ ಮಾಡುತ್ತದೆ. ಹೀಗಾಗಿ ಯಾರೂ ಕೂಡ ಕಾನೂನುನ್ನು ಕೈಗೆತ್ತಿಕೊಳ್ಳುವುದು, ವೈದ್ಯರ ಮೇಲೆ ಹಲ್ಲೆ, ನಿಂದನೆ ಮಾಡುವುದು ಸಮಂಜಸವಲ್ಲ ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದ್ದಾರೆ.