alex Certify ರೈತರೇ ಗಮನಿಸಿ : ಭತ್ತ ಖರೀದಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರೇ ಗಮನಿಸಿ : ಭತ್ತ ಖರೀದಿ ಪ್ರಕ್ರಿಯೆ ಕುರಿತು ಇಲ್ಲಿದೆ ಮುಖ್ಯ ಮಾಹಿತಿ

ಮಡಿಕೇರಿ : ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಇದೇ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2023-24 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಆದೇಶದಂತೆ 2023-24ನೇ ಸಾಲಿಗೆ ರೈತರಿಂದ ಕನಿಷ್ಟ ಬೆಂಬಲ ಬೆಲೆಯೋಜನೆಯಡಿ ಭತ್ತ ಖರೀದಿ ಮಾಡಲಾಗುತ್ತಿದ್ದು, ಈ ಯೋಜನೆಯ ಸದುಪಯೋಗ ಪಡೆಯುವಂತೆ ಕೃಷಿಕರಲ್ಲಿ ಮನವಿ ಮಾಡಿದರು.

ರೈತರ ನೋಂದಣಿ ಸಂಬಂಧ ತಾಂತ್ರಿಕ ತೊಂದರೆಗಳು ಕಂಡುಬಂದಲ್ಲಿ ಕೂಡಲೆ ಸರಿಪಡಿಸಲು ಕೃಷಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್ ಅವರು ಜಿಲ್ಲೆಗೆ ಭತ್ತ ಮತ್ತು ರಾಗಿ ಖರೀದಿಸಲು ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯನ್ನು ಖರೀದಿ ಏಜೆನ್ಸಿ ಯನ್ನಾಗಿ ಸರ್ಕಾರ ನೇಮಕ ಮಾಡಿದ್ದು ಖರೀದಿ ಪ್ರಕ್ರಿಯೆಯು ಇವರ ಮುಖಾಂತರ ನಡೆಯುತ್ತಿದೆ ಎಂದು ವಿವರಿಸಿದರು.

ಕೇಂದ್ರ ಸರ್ಕಾರದ ಬೆಂಬಲ ಬೆಲೆಯಡಿ ಡಿಸೆಂಬರ್ನಿಂದ ರೈತರ ನೋಂದಣಿ ಕಾರ್ಯ ಆರಂಭವಾಗಿದ್ದು, ಕೆಲವೇ ದಿನಗಳಲ್ಲಿ ಭತ್ತ/ ರಾಗಿ ಖರೀದಿ ಪ್ರಕ್ರಿಯೆ ನಡೆಯಲಿದೆ. ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಒಬ್ಬ ಬೆಳಗಾರರಿಂದ ಗರಿಷ್ಠ 40 ಕ್ವಿಂಟಾಲ್ ಭತ್ತ ಹಾಗೂ ರಾಗಿ ಕನಿಷ್ಟ 10 ರಿಂದ ಗರಿಷ್ಟ 20 ಕ್ವಿಂಟಾಲ್ ಖರೀದಿಸಲಾಗುತ್ತಿದೆ. ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್ ಗೆ 2183 ರೂ. ನಿಗದಿಪಡಿಸಲಾಗಿದ್ದು, ರಾಗಿ ಪ್ರತಿ ಕ್ವಿಂಟಲ್ ಗೆ 3846 ರೂ ನಿಗದಿಪಡಿಸಲಾಗಿದೆ ಎಂದು ಆಹಾರ ಇಲಾಖೆಯ ಜಂಟಿ ನಿರ್ದೇಶಕರು ಮಾಹಿತಿ ನೀಡಿದರು.

ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲ ಆಗುವಂತೆ ಮಡಿಕೇರಿ ಎಪಿಎಂಸಿ ಆವರಣ, ಕುಶಾಲನಗರ ಎಪಿಎಂಸಿ ಆವರಣ, ಗೋಣಿಕೊಪ್ಪ ಎಪಿಎಂಸಿ ಆವರಣ ಹಾಗೂ ಸೋಮವಾರಪೇಟೆ ಎಪಿಎಂಸಿ ಮಾರ್ಕೇಟ್ ಆವರಣದಲ್ಲಿ ಖರೀದಿ ಮಾಡಲಾಗುತ್ತಿದೆ. ರೈತರು ಸಂಬಂಧಪಟ್ಟ ನೋಂದಣಿ ಕೇಂದ್ರಗಳಲ್ಲಿಯೇ ತಮ್ಮ ಭತ್ತವನ್ನು ನೀಡಬಹುದಾಗಿದೆ ಎಂದರು.

ಬೇಡಿಕೆಗೆ ತಕ್ಕಂತೆ ಹೆಚ್ಚಿನ ಕೇಂದ್ರ ತೆರೆಯಲು ಸಹ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸೂಕ್ತ ದಾಸ್ತಾನಿಗಾಗಿ ಭತ್ತ ಖರೀದಿ ಕೇಂದ್ರಗಳಲ್ಲಿ ಭತ್ತದ ಗುಣಮಟ್ಟವನ್ನು ಪರೀಕ್ಷಿಸಲು ಗ್ರೇಡರ್ಗಳನ್ನು ನಿಯೋಜಿಸಲು ಕೃಷಿ ಇಲಾಖೆ ಜಂಟಿ ನಿರ್ದೇಶಕರಿಗೆ ಸಲಹೆ ಮಾಡಿದರು.

ಭತ್ತವನ್ನು ಮಾರಾಟ ಮಾಡಬೇಕಾದ ರೈತರು ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿಯಾಗಿರಬೇಕು. ಒಂದು ವೇಳೆ ರೈತರು ನೋಂದಣಿ ಮಾಡದಿದ್ದಲ್ಲಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ತಾವು ಬೆಳದ ಭತ್ತವನ್ನು ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ ಎಂದರು.

ಖರೀದಿ ಕೇಂದ್ರಗಳಲ್ಲಿ ರೈತರಿಂದ ಖರೀದಿ ಮಾಡಿದ ಭತ್ತದ ಮೊತ್ತವನ್ನು ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತದೆ. ನೋಂದಣಿ ಕೇಂದ್ರದಲ್ಲಿ ರೈತರು ಫ್ರೂಟ್ಸ್ ಐಡಿ, ಆಧಾರ್ ಸಂಖ್ಯೆಗೆ ಜೋಡಣೆಯಾದ ತಮ್ಮ ಎನ್ಪಿಸಿಐ ಬ್ಯಾಂಕ್ ಖಾತೆಯ ವಿವರಗಳನ್ನು ನೀಡಬೇಕಿದೆ ಎಂದು ಅವರು ತಿಳಿಸಿದರು.
ಭತ್ತದ ಖರೀದಿ ನೋಂದಣಿ ಕುರಿತು ಗ್ರಾಮೀಣ ಭಾಗದಲ್ಲಿ ರೈತರಿಗೆ ಹಾಗೂ ರೈತ ಮುಖಂಡರಿಗೆ ಹಾಗೂ ರೈತ ಸಂಪರ್ಕ ಕೇಂದ್ರಗಳ ಮೂಲಕ ಹೆಚ್ಚಿನ ಮಾಹಿತಿ ನೀಡುವಂತೆ ಹಾಗೂ ರೈತರ ನೋಂದಣಿ ಕೇಂದ್ರಗಳು ಹಾಗೂ ಭತ್ತ ಖರೀದಿ ಕೇಂದ್ರಗಳ ಕುರಿತು ವಿವರಗಳನ್ನು ನೀಡುವಂತೆ ಜಿಲ್ಲಾಧಿಕಾರಿಗಳು ಖರೀದಿ ಏಜೆನ್ಸಿಯವರಿಗೆ ಆಹಾರ ಇಲಾಖೆ ಜಂಟಿ ನಿರ್ದೇಶಕರು ಸಲಹೆ ನೀಡಿದರು.

ಸರ್ಕಾರವು ಪೌಷ್ಟಿಕಾಂಶತೆಯಿಂದ ಕೂಡಿದ ಸಾರವರ್ದಿತ ಅಕ್ಕಿಯನ್ನು ಫಲಾನುಭವಿಗಳಿಗೆ ನೀಡಲು ಉದ್ದೇಶಿಸಿದ್ದು, ಈ ಸಂಬಂಧ ಅಕ್ಕಿ ಗಿರಣಿಗಳಲ್ಲಿ ಹಲ್ಲಿಂಗ್ ಮಾಡುವಾಗ ಸಾರವರ್ದಿತ ಅಕ್ಕಿಯನ್ನು ತಯಾರು ಮಾಡಲು ಕಡ್ಡಾಯವಾಗಿ ಅಕ್ಕಿ ಗಿರಣಿ ಮಾಲೀಕರುಗಳು ಬ್ಲೆಂಡಿಂಗ್ ಮಿಷನ್ನ್ನು ಅಳವಡಿಸಲು ಹಾಗೂ ಅಳವಡಿಸದ ಅಕ್ಕಿ ಗಿರಣಿಗಳಿಗೆ ಸರಕಾರದ ಆದೇಶದಂತೆ ಹಲ್ಲಿಂಗ್ಗೆ ಭತ್ತವನ್ನು ನೀಡಲು ಸಾಧ್ಯವಿರುವುದಿಲ್ಲ ಎಂದು ಹೇಳಿದರು.ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಸೋಮಸುಂದರ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯ ಅಧಿಕಾರಿ ಕೆ.ಪಿ.ಸೋಮಯ್ಯ, ಆಹಾರ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...