ಬೆಂಗಳೂರು: ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.
ನೈರುತ್ಯ ಪದವೀಧರ ಕ್ಷೇತ್ರದಿಂದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತವೆಂದು ಅವರು ಮಾಹಿತಿ ನೀಡಿದ್ದಾರೆ. ಈ ಹಿಂದೆ ಕಾಂಗ್ರೆಸ್ ಪಕ್ಷದವರು ನನ್ನನ್ನು ಸಂಪರ್ಕಿಸಿದ್ದರು. ಆದರೆ, ಅದು ಸಂಪೂರ್ಣವಾಗಲಿಲ್ಲ. ಈಗ ಮತ್ತೆ ಅವಕಾಶ ಕೊಡುತ್ತೇನೆ ಎಂದರೆ ಯೋಚನೆ ಮಾಡುತ್ತೇನೆ. ಆದರೆ, ಬಿಜೆಪಿ ಕಡೆ ನಾನು ಮತ್ತೆ ಹೋಗುವ ಸಾಧ್ಯತೆ ಕಡಿಮೆ ಎಂದು ಆಯನೂರು ಮಂಜುನಾಥ್ ತಿಳಿಸಿದ್ದಾರೆ.
ಎಲ್ಲಾ ಕಡೆಯಿಂದಲೂ ನನಗೆ ಆಹ್ವಾನ ಇರುವುದು ನಿಜ. ನಾನು ಕಾಂಗ್ರೆಸ್ ಪಕ್ಷದ ನಾಯಕರನ್ನು ಭೇಟಿ ಮಾಡಿಲ್ಲ. ಕಾಂಗ್ರೆಸ್ ಸೇರುವ ವದಂತಿ ಸರಿಯಲ್ಲ. ಸದ್ಯ ಮಾಜಿ ಸಚಿವರು, ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ಹಬ್ಬಿರುವುದರಿಂದ ಅದರಲ್ಲಿ ನನ್ನ ಹೆಸರು ಇರಬಹುದು. ಆದರೆ ಅದು ಸತ್ಯವಲ್ಲ ಎಂದು ತಿಳಿಸಿದ್ದಾರೆ.
ವಿಧಾನ ಪರಿಷತ್ ಬಿಜೆಪಿ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು. ಕಳೆದ ಬಾರಿ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿದ ಅವರು ಈ ಬಾರಿಯೂ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎನ್ನುವ ವದಂತಿ ಹರಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುತ್ತೇನೆ ಎಂದಿದ್ದಾರೆ.