ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 17 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದ ಕಾಂಗ್ರೆಸ್ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಇದೇ ವೇಳೆ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಲಾಗಿದೆ.
ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಅವರಿಗೆ ಟಿಕೆಟ್ ಘೋಷಿಸಲಾಗಿದೆ. ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ಆಯನೂರು ಮಂಜುನಾಥ್ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದರು. ಪರಾಭವಗೊಂಡ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು. ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಪರಿಷತ್ ಚುನಾವಣೆಗೆ ಆಯನೂರು ಮಂಜುನಾಥ್ ಗೆ ಎಐಸಿಸಿ ಟಿಕೆಟ್ ಘೋಷಣೆ ಮಾಡಿದೆ. ಪ್ರಬಲ ಆಕಾಂಕ್ಷಿಯಾಗಿದ್ದ ಎಸ್.ಪಿ. ದಿನೇಶ್ ಅವರಿಗೆ ನಿರಾಸೆಯಾಗಿದೆ.