ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರೈತರಿಗೆ ಆತ್ಮಹತ್ಯೆ ಗ್ಯಾರಂಟಿ ನೀಡಿದೆ ಎಂದು ಮಾಜಿ ಕೃಷಿ ಸಚಿವ ಬಿ.ಸಿ.ಪಾಟೀಲ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬಿ.ಸಿ.ಪಾಟೀಲ್ ಸೆಪ್ಟೆಂಬರ್ ಅಂತ್ಯದವರೆಗೆ ರಾಜ್ಯದಲ್ಲಿ 900 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬರ ಪರಿಸ್ಥಿತಿಯಿಂದ ರೈತರು ಕಂಗಾಲಾಗಿ ಕಣ್ಣೀರಿಡುತ್ತಿದ್ದಾರೆ. ಆದರೂ ಸರ್ಕಾರದ ಒಬ್ಬನೇ ಒಬ್ಬ ಸಚಿವ ರೈತರ ಹೊಲಗಳಿಗೆ ಭೇಟಿ ನೀಡಿ ಸಂಕಷ್ಟ ಆಲಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಆಡಳಿತದಲ್ಲಿಯೇ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಹೆಚ್ಚಾಗಿದೆ. 2015-16ರಲ್ಲಿ 1,525 ರೈತರು, 2016-17ರಲ್ಲಿ 1,203, 2017-18ರಲ್ಲಿ 1,320 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಆತ್ಮಹತ್ಯೆ ಪ್ರಮಾಣ ಕಡಿಮೆ ಆಯಿತು. ನಂತರ 2019-20ರಲ್ಲಿ 1,091, 2020-21ರಲ್ಲಿ 855, 2021-22ರಲ್ಲಿ 963 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ ಈ ಅವಧಿಯಲ್ಲಿ 900 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳೆ ನಷ್ಟಕ್ಕೆ ಈವರೆಗೂ ಯಾವುದೇ ಪರಿಹಾರವನ್ನು ಸರ್ಕಾರ ನೀಡಿಲ್ಲ ಎಂದು ಹೇಳಿದರು.