ಬೆಂಗಳೂರು: ಸಂಪುಟ ರಚನೆ ವಿಚಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಟ್ಟಿದ್ದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಬಿಜೆಪಿ ಸರ್ಕಾರ ಬರಲು ವಲಸಿಗರು ಕಾರಣರಾಗಿದ್ದಾರೆ. ಅವರಿಗೆ ಮತ್ತೆ ಸಚಿವ ಸ್ಥಾನ ನೀಡುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚೆ ಮಾಡುತ್ತೇನೆ. ಸಂಪುಟದಲ್ಲಿ ಯಾರಿಗೆ ಅವಕಾಶ ನೀಡಬೇಕೆಂದು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪೂರ್ಣ ಸ್ವಾತಂತ್ರ್ಯ ಇದೆ. ಏನೇ ಇದ್ದರೂ ಮುಖ್ಯಮಂತ್ರಿಯವರ ಬಳಿ ಹೋಗಿ ಮಾತನಾಡುವಂತೆ ಕಾರ್ಯಕರ್ತರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದಾರೆ.
ಮಾಜಿ ಸಿಎಂ ಜಗದೀಶ್ ಶೆಟ್ಟರ್ ನನ್ನ ಬಳಿ ಬಂದು ಮಾತನಾಡಿದ್ದಾರೆ. ಯುವಕರಿಗೆ ಅವಕಾಶ ಕೊಡಬೇಕಿದೆ. ಸಂಪುಟ ಸೇರುವುದಿಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಗಣೇಶ ಹಬ್ಬದ ನಂತರ ವಾರಕ್ಕೊಮ್ಮೆ ಪ್ರತಿ ಜಿಲ್ಲೆಗೆ ಪ್ರವಾಸ ಕೈಗೊಳ್ಳುತ್ತೇನೆ. ಅಧಿಕಾರ ಸ್ಥಾನಮಾನ ಇಲ್ಲದೆಯೂ ಕೆಲಸ ಮಾಡಬಹುದು. ಎಂದು ತೋರಿಸುತ್ತೇನೆ. ರಾಜ್ಯದಲ್ಲಿ ಪ್ರವಾಸ ಮಾಡಿ ಪಕ್ಷವನ್ನು ಸಂಘಟಿಸುತ್ತೇನೆ ಎಂದು ತಿಳಿಸಿದ್ದಾರೆ.