
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದ ಮೇರೆಗೆ ಬಿ.ಎಸ್.ವೈ. ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ ಮತ್ತು ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಬಿಡಿಎ ಗುತ್ತಿಗೆ ನೀಡುವ ಬಗ್ಗೆ ಭ್ರಷ್ಟಾಚಾರ ಎಸಗಿದ್ದರು ಎಂದು ದೂರು ನೀಡಲಾಗಿತ್ತು. ಗುತ್ತಿಗೆ ನೀಡುವ ಸಂಬಂಧ ಭ್ರಷ್ಟಾಚಾರ ನಡೆದಿದೆ ಎಂದು ಕೋರ್ಟ್ ನಲ್ಲಿ ಟಿ.ಜೆ. ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು.
ಆದರೆ, ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ದೂರು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ ಹೈಕೋರ್ಟ್ ಎಫ್ಐಆರ್ ದಾಖಲಿಸಲು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ವರದಿ ನೀಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತಕ್ಕೆ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿದ ಲೋಕಾಯುಕ್ತ ತನಿಖೆಗೆ ಮುಂದಾಗಿದೆ. ಮಾಜಿ ಸಿಎಂ ಯಡಿಯೂರಪ್ಪ ಮತ್ತು ಕುಟುಂಬದವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎನ್ನಲಾಗಿದೆ.