ಶಿವಮೊಗ್ಗ: ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸಿದ್ಧತೆ ನಡೆದಿದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ. ಈ ನಡುವೆ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮೂರರಿಂದ ಮೂರುವರೆ ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಘವೇಂದ್ರ ಕ್ಷೇತ್ರದಲ್ಲಿ ಮಾಡಿದ ಒಳ್ಳೆಯ ಕೆಲಸಗಳು ರಾಜ್ಯಕ್ಕೆ ಜಾರಿ ತಂದಿರುವ ಹಲವು ಯೋಜನೆಗಳು, ನೀರಾವರಿ ಯೋಜನೆ, ಕೆರೆಕಟ್ಟೆಗಳನ್ನು ತುಂಬಿಸುವ ಯೋಜನೆಯಂತಹ ಉತ್ತಮ ಕೆಲಸ ಮಾಡಿದ್ದಾರೆ. ಇವೆಲ್ಲವೂ ಅವರ ಗೆಲುವಿಗೆ ಸಹಕಾರಿಯಾಗಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಪರ, ಮೋದಿ ಪರ ಅಲೆಯಿದೆ. ಈ ಬಾರಿ 28 ಕ್ಷೇತ್ರಗಳಲ್ಲಿಯೂ ಅತಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ ಎಂದರು.
ಇದೇ ವೇಳೆ ಬರ ಪರಿಹಾರ ಕಡಿಮೆಯಾಗಿದೆ ಎಂದು ಕಾಂಗ್ರೆಸ್ ಪ್ರತಿಭಟನೆ, ಸಿಎಂ, ಡಿಸಿಎಂ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ, ಬರ ಪರಿಹಾರ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿಸಬಹುದು. ಆದರೆ ಕಾಂಗ್ರೆಸ್ ನಾಯಕರು ಪ್ರತಿಭಟಿಸುವ ಅಗತ್ಯವಿಲ್ಲ. ಈಗಾಗಲೇ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ಕಾಂಗ್ರೆಸ್ ನವರದ್ದು ಕೇವಲ ರಾಜಕೀಯ ದುರುದ್ದೇಶದ ಪ್ರತಿಭಟನೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಬರಿ ಟೀಕಿಸಿವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಕಿಡಿಕಾರಿದರು.