ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಶಾಸಕ ಯತ್ನಾಳ್ ಹಾಗೂ ರಮೇಶ್ ಜಾರಕಿಹೊಳಿ ಯತ್ನ ನಡೆಸುತ್ತಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಜಯೇಂದ್ರ, ದೇವರು ಅವರಿಗೆ ಒಳ್ಳೆಯದು ಮಾಡಲಿ ಎಂದು ಹೇಳಿದರು.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ನನ್ನ ಮೇಲೆ ಸಾಕಷ್ಟು ಜವಾಬ್ದಾರಿಗಳಿವೆ. ಪಕ್ಷ ಸಂಘಟನೆ ಮಾಡಿ, ಮತ್ತೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕು. ಆ ನಿಟ್ಟಿನಲ್ಲಿ ನಾನು ಸಾಕಷ್ಟು ಹೋರಾಟ ಮಾಡುತ್ತಿದ್ದೇನೆ. ಪಕ್ಷವನ್ನು ಮತ್ತೆ ಬಹುಮತಗಳಿಂದ ಅಧಿಕಾರಕ್ಕೆ ತರುವ ಕೆಲಸವನ್ನು ಮಾಡುತ್ತೇನೆ ಎಂದರು.
ಹೊಸ ವರ್ಷ ಬಂದರೂ ಹಳೇ ಕಥೆ ಮುಗಿದಿಲ್ಲ ಎಂಬಂತೆ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಕೇಳಿಬರುತ್ತಿರುವ ಚರ್ಚೆ ಬಗ್ಗೆ, ರಾಜ್ಯಾದ್ಯಂತ ಓಡಾಡಿ, ಪಕ್ಷ ಸಂಘಟನೆ ಮಾಡಿ, ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ ಎಂದು ಹೇಳುತ್ತಿದ್ದೇನೆ ಎಂದರೆ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದರ್ಥ. ಇದರಲ್ಲಿ ಯಾವುದೇ ಅನುಮಾನ ಬೇಡ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇನೆ. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದೇ ನಮ್ಮ ಗುರಿ ಎಂದು ಹೇಳಿದರು.