ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದಲ್ಲಿ 20 ದಿನದ ಶಿಶುವನ್ನು ಮಾರಾಟ ಮಾಡಿದ ಪೋಷಕರು ಹಾಗೂ ಖರೀದಿಸಿದ್ದ ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ನಗರಗೆರೆಯ ಬುಡಕಟ್ಟು ಜನಾಂಗದ ದಂಪತಿಗೆ ಗಂಡು ಮಗು ಜನಿಸಿದ್ದು, ಒಂದು ವಾರದ ಹಿಂದೆ ಬೆಂಗಳೂರಿನ ನಿವಾಸಿಗಳಿಗೆ ಮಗುವನ್ನು ಮಾರಾಟ ಮಾಡಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಮಕ್ಕಳ ಸಹಾಯವಾಣಿ ಸಿಬ್ಬಂದಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸಿದಾಗ ಮಗುವನ್ನು ಮಾರಾಟ ಮಾಡಿರುವ ಬಗ್ಗೆ ತಿಳಿಸಿದ್ದಾರೆ. ಮಗುವನ್ನು ಮಾರಾಟ ಮಾಡಿದ ದಂಪತಿ ಮತ್ತು ಖರೀದಿಸಿದ್ದವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಗುವನ್ನು ಆರೋಗ್ಯ ತಪಾಸಣೆಗೆ ಮಕ್ಕಳ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.