
ಕೊಪ್ಪಳ: ಬಗರ್ ಹುಕುಂ ಅರ್ಜಿಗಳ ತ್ವರಿತ ವಿಲೇವಾರಿಗೆ ಆ್ಯಪ್ ಸಿದ್ದಪಡಿಸುತ್ತಿದ್ದು, ಆ್ಯಪ್ ಮೂಲಕವೇ ಅರ್ಜಿ ವಿಲೇವಾರಿ ಮಾಡಿ ನಂತರ ಅರ್ಹ ಫಲಾನುಭವಿಗಳಿಗೆ ಇ- ಸಾಗುವಳಿ ಚೀಟಿ ಒದಗಿಸಬಹುದಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಅರ್ಜಿ ನಮೂನೆ 50, 53, 57 ರಲ್ಲಿ ಅಕ್ರಮ- ಸಕ್ರಮ ಯೋಜನೆ ಅಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಇವುಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿದವರಿಗೆ ಸಾಗುವಳಿ ಚೀಟಿ ನೀಡುವುದು ಅಸಾಧ್ಯ ಎಂದು ತಿಳಿಸಿದ್ದಾರೆ.
ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಅಧಿಕಾರಿಗಳು ಬಗರ್ ಹುಕುಂ ತಂತ್ರಾಂಶದ ಮೂಲಕ ಕೃಷಿ ಚಟುವಟಿಕೆ ನಡೆಯುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಬೇರೆ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡಬೇಕು ಎಂದು ತಿಳಿಸಿದ್ದಾರೆ.
ಬಗರ್ ಹುಕುಂ ಅರ್ಜಿಗಳ ಪೈಕಿ ಅರ್ಹ ರೈತರಿಗೆ ಮುಂದಿನ ಆರು ತಿಂಗಳ ಒಳಗೆ ಸಾಗುವಳಿ ಚೀಟಿ ಕೊಡಬೇಕು. ಕೃಷಿ ಜಮೀನುಗಳಿಗೆ ತೆರಳಲು ರಸ್ತೆ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.