ಬೆಂಗಳೂರು: ಬಗರ್ ಹುಕುಂ ಸಾಗುವಳಿದಾರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಎಲ್ಲ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲು 10 ದಿನಗಳೊಳಗೆ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.
ಹೊಸ ತಾಲೂಕು ರಚನೆ ನಂತರ ಬಗರ್ ಹುಕುಂ ಸಾಗುವಳಿ ಅರ್ಜಿಗಳನ್ನು ವಿಭಜಿತ ತಾಲ್ಲೂಕುಗಳಿಂದ ವರ್ಗಾಯಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. 50 ಹೊಸ ತಾಲೂಕು ಘೋಷಣೆಯಾಗಿರುವ ಕಡೆಗಳಲ್ಲಿ ಸಮಸ್ಯೆಯಾಗಿದ್ದು, ಇದನ್ನು ಬಗೆಹರಿಸಲು ಸೂಚಿಸಲಾಗಿದೆ ಎಂದರು.
ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿ ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ರಚಿಸಲು ಅವಕಾಶ ಕಲ್ಪಿಸಲಾಗಿದೆ. ನಿರ್ಬಂಧಿತ ಪ್ರದೇಶ ಹೊರತುಪಡಿಸಿ ಉಳಿದ ಕಡೆಗಳಲ್ಲಿ ಸಮಿತಿ ರಚಿಸಿ ಬಗರ್ ಹುಕುಂ ಸಾಗುವಳಿ ಅರ್ಜಿ ಇತ್ಯರ್ಥ ಪಡಿಸಲಾಗುವುದು ಎಂದು ಹೇಳಿದ್ದಾರೆ.