ಬೆಂಗಳೂರು: ಕರ್ನಾಟಕ ಮತ್ತು ಕೇರಳ ನಡುವಿನ ಸಂಪರ್ಕ ಮಾರ್ಗವಾಗಿರುವ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ರಾತ್ರಿ ಹೊಸದಾಗಿ ವಾಹನ ಸಂಚಾರಕ್ಕೆ ಅವಕಾಶವಿಲ್ಲ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ಸಭೆ ನಡೆಸಿದ ಸಚಿವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪ್ರಸ್ತುತ ರಾತ್ರಿ 9 ಗಂಟೆಯವರೆಗೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಅದರ ಹೊರತಾಗಿ ಕರ್ನಾಟಕ ಮತ್ತು ಕೇರಳದ ತಲಾ ಒಂದು ಬಸ್ ಗಳು ರಾತ್ರಿ ವೇಳೆ ಸಂಚರಿಸುತ್ತಿವೆ. ವೈದ್ಯಕೀಯ ತುರ್ತು ಸಂದರ್ಭದಲ್ಲಿ ವಾಹನಗಳನ್ನು ಪರಿಶೀಲಿಸಿ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ. ಇದರ ಹೊರತಾಗಿ ಹೊಸದಾಗಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.