ಬೆಂಗಳೂರು : ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಕಡೆ ಭಾರಿ ಪ್ರತಿಭಟನೆ, ಹೋರಾಟ ನಡೆಯುತ್ತಿದೆ. ಇದೀಗ ಸೆ.26 ರಂದು ‘ಬೆಂಗಳೂರು ನಗರ’ ಬಂದ್ ಗೆ ರೈತ ಮುಖಂಡ, ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತ್ ಕುಮಾರ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಕುರುಬೂರು ಶಾಂತ್ ಕುಮಾರ್ ಬೆಂಗಳೂರು ನಗರದಲ್ಲಿ ಸೆ.26 ರಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಬಂದ್ ಗೆ ಕರೆ ನೀಡಿದೆ. ಇದು ನಮ್ಮ ಬಂದ್ ಅಲ್ಲ, ನಾಗರಿಕರ ಬಂದ್. ಎಲ್ಲರೂ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.
ಸೆ.26 ರಂದು ಬೆಳಗ್ಗೆ 11 ಗಂಟೆಗೆ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ ವರೆಗೆ ರ್ಯಾಲಿ ನಡೆಸಲಾಗುತ್ತದೆ. ಕಾವೇರಿಗಾಗಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಮನವಿ ಮಾಡಲಾಗಿದೆ. ಐಟಿ, ಕಂಪನಿ, ಚಲನಚಿತ್ರ ವಾಣಿಜ್ಯ ಮಂಡಳಿಗಳು ಕೂಡ ಬೆಂಬಲ ನೀಡಬೇಕು. ಸರ್ಕಾರ ಕೂಡಲೇ ವಿಶೇಷ ಅಧಿವೇಶನ ಕರೆದು ಕಾವೇರಿ ನೀರಿನ ಬಗ್ಗೆ ತೀರ್ಮಾನ ಕೈಗೊಳ್ಳಬೇಕು. ಸುಪ್ರೀಂಕೋರ್ಟ್ CWMA ಆದೇಶವನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿರುವ ಬೆನ್ನಲ್ಲೇ ರಾಜ್ಯದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಬೆಂಗಳೂರು, ಮಂಡ್ಯ, ಮದ್ದೂರು ಭಾಗದಲ್ಲಿ ಅನ್ನದಾತನ ಆಕ್ರೋಶ ತೀವ್ರ ಸ್ವರೂಪ ಪಡೆದಿದೆ.ಮಂಡ್ಯ, ಮದ್ದೂರು ಬಂದ್ ಮಾಡಿ ಬೀದಿಗಿಳಿದು ಹೋರಾಟ ನಡೆಸಿರುವ ರೈತ ಸಂಘಟನೆ, ಕನ್ನಡಪರ ಸಂಘಟನೆ ಕಾರ್ಯಕರ್ತರು, ಬೆಂಗಳೂರು ಮೈಸೂರು ಹೆದ್ದಾರಿ ತಡೆ ನಡೆಸಿದ್ದಾರೆ. ಇನ್ನೊಂದೆಡೆ ರಸ್ತೆಯಲ್ಲಿಯೇ ಉರುಳುಸೇವೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ತಕ್ಷಣ ನಿಲ್ಲಿಸಿ ರಾಜ್ಯದ ರೈತರ ಹಿತ ಕಾಯುವಂತೆ ಆಗ್ರಹಿಸಿದ್ದಾರೆ. ಮದ್ದೂರಿನಲ್ಲಿ ರಸ್ತೆಯಲ್ಲಿ ಟೈರ್ ಗಳಿಗೆ ಬೆಂಕಿ ಹಚ್ಚಿಸಿರುವ ಕನ್ನಡಪರ ಸಂಘಟನೆಗಳು ರಾಜ್ಯ ಸರ್ಕಾರ ಹಾಗೂ ತಮಿಳುನಾಡಿನ ವಿರುದ್ಧ ಕಿಡಿಕಾರಿದ್ದಾರೆ.