ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಪರಿಶೀಲನೆ ಬಳಿಕ ಇದೊಂದು ಹುಸಿಬಾಂಬ್ ಬೆದರಿಕೆ ಕರೆ ಎಂದು ತಿಳಿದುಬಂದಿದೆ. ಈ ಘಟನೆ ಬೆನ್ನಲ್ಲೇ ಇದೀಗ ಬೆಂಗಳೂರಿನ ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಜೈನ್ ಹೆರಿಟೇಜ್ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಮಧ್ಯರಾತ್ರಿ ಶಾಲೆಯ ಇ-ಮೇಲ್ ಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಮೇಲ್ ರವಾನಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದಿಂದ ಶಾಲೆಯಲ್ಲಿ ತಪಾಸಣೆ ನಡೆಸಲಾಗಿದೆ. ಶಾಲೆಯ ಸಿಬ್ಬಂದಿಗಳನ್ನು ಹೊರ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ.