ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಲಾಗಿದೆ.
ಶುಕ್ರವಾರ ರಾಜ್ಯದಲ್ಲಿ ಎಲ್ಲಾ ಸರ್ಕಾರಿ ಕಚೇರಿ, ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಮೈಸೂರು ವಿಶ್ವವಿದ್ಯಾಲಯ ಮುಂದೂಡಿವೆ.
ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಇಂದು ನಡೆಯಬೇಕಿತ್ತು. ರಜೆಯ ಕಾರಣ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.
ಹಾಗೆಯೇ ಮೈಸೂರು ವಿಶ್ವವಿದ್ಯಾಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಕುಲಸಚಿವರು ತಿಳಿಸಿದ್ದಾರೆ.