ಕನ್ನಡ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕ್ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಇರುವ ಕ್ಲರಿಕಲ್ ಹುದ್ದೆಗಳಿಗೆ ನೇಮಕಾತಿ ಸಂದರ್ಭದಲ್ಲಿ ಕನ್ನಡದಲ್ಲಿ ಪರೀಕ್ಷೆ ನಡೆಸಬೇಕೆಂಬ ಒತ್ತಡಕ್ಕೆ ಕೇಂದ್ರ ಸರ್ಕಾರ ಮಣಿದಿದೆ.
ಈ ಕುರಿತಾಗಿ ಆದೇಶ ಹೊರಡಿಸಿದ್ದು, ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ದೇಶದ ಎಲ್ಲ ಅಭ್ಯರ್ಥಿಗಳಿಗೂ ಅನುಕೂಲವಾಗಲಿದೆ. ಸ್ಥಳೀಯರಿಗೆ ಬ್ಯಾಂಕ್ ಹುದ್ದೆಗಳನ್ನು ಪಡೆಯಲು ಹೆಚ್ಚು ಅವಕಾಶ ಸಿಗಲಿದ್ದು, ಸ್ಥಳೀಯ ಭಾಷೆಯಲ್ಲಿಯೇ ಬ್ಯಾಂಕಿಂಗ್ ವ್ಯವಹಾರ ನಡೆಸಬಹುದು. ಗ್ರಾಮೀಣ ಬ್ಯಾಂಕುಗಳ ರೀತಿಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಬಹುದು.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಳೆದ ಏಪ್ರಿಲ್ ನಲ್ಲಿ 5237 ಕ್ಲರಿಕಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ಹಿಂದಿ, ಇಂಗ್ಲಿಷ್ ಜೊತೆಗೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿಯೂ ಪರೀಕ್ಷೆ ನಡೆಸಲಾಗುವುದು ಎಂದು ಹೇಳಲಾಗಿದೆ.