ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕನ್ನಡಿಗರ ಆಕ್ರೋಶಕ್ಕೆ ಮಣಿದಿದೆ. ಬ್ಯಾಂಕಿಂಗ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಕುರಿತು ಪರಿಶೀಲನೆಗೆ ಸಮಿತಿ ರಚಿಸಲಾಗಿದೆ.
ರಾಷ್ಟ್ರೀಕೃತ ಬ್ಯಾಂಕುಗಳ ಹುದ್ದೆಗಳಿಗೆ ನೇಮಕ ಮಾಡುವ ಸಂದರ್ಭದಲ್ಲಿ ರಾಜ್ಯದಲ್ಲಿನ ಹುದ್ದೆಗಳು ಕನ್ನಡಿಗರಿಗೆ ಲಭ್ಯವಾಗಬೇಕು ಈ ನಿಟ್ಟಿನಲ್ಲಿ ನಿಯಮ ರೂಪಿಸಬೇಕು. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಒತ್ತಾಯಿಸಲಾಗಿತ್ತು.
ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ -ಐಬಿಪಿಎಸ್ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಿದ್ದ ಅಧಿಸೂಚನೆಯನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ. ಮಾತ್ರವಲ್ಲ, ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಪರಿಶೀಲನೆಗೆ ಸಮಿತಿಯನ್ನು ರಚಿಸಲಾಗಿದೆ.
ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಪರೀಕ್ಷೆ ನಡೆಸುವುದಾಗಿ ಹೇಳಲಾಗಿದ್ದರೂ ಕೂಡ ಐಬಿಪಿಎಸ್ ಇತ್ತೀಚೆಗೆ ಬ್ಯಾಂಕ್ ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆಯಲ್ಲಿ ಹಳೆಯ ನಿಯಮವನ್ನು ಮುಂದುವರಿಸಿತ್ತು. ಇದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕೇಂದ್ರ ಸರ್ಕಾರ ಐಬಿಪಿಎಸ್ ಅಧಿಸೂಚನೆಯನ್ನು ತಡೆಹಿಡಿದು ಪರಿಶೀಲನೆಗೆ ಸಮಿತಿ ರಚಿಸಿದೆ. ಕನ್ನಡ ಸೇರಿದಂತೆ 22 ಪ್ರಾದೇಶಿಕ ಭಾಷೆಗಳಲ್ಲಿ ಪರೀಕ್ಷೆ ನಡೆಸುವ ಬೇಡಿಕೆ ಪರಿಶೀಲನೆ ನಡೆಸಲಾಗುತ್ತಿದ್ದು, 15 ದಿನದೊಳಗೆ ವರದಿ ಸಲ್ಲಿಸಲು ಸಮಿತಿಗೆ ಸೂಚನೆ ನೀಡಲಾಗಿದೆ. ಅಲ್ಲಿವರೆಗೂ ನೇಮಕಾತಿ ಪ್ರಕ್ರಿಯೆ ತಡೆಹಿಡಿಯಲಾಗುವುದು ಎನ್ನಲಾಗಿದೆ.