ಬೆಂಗಳೂರು: ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು 15 ದಿನದೊಳಗೆ ಆಯಾ ಆಯಾ ಜಿಲ್ಲೆಗಳ ವ್ಯಾಪ್ತಿಯ ಲೀಡ್ ಬ್ಯಾಂಕುಗಳಿಂದ ಕಳಿಸಿ ತ್ವರಿತವಾಗಿ ಸಾಲ ನೀಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬ್ಯಾಂಕರ್ ಗಳಿಗೆ ತಿಳಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ಪ್ರಧಾನಮಂತ್ರಿ ಸ್ವನಿಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಬ್ಯಾಂಕರ್ ಗಳೊಂದಿಗೆ ಚರ್ಚೆ ನಡೆಸಿದ ಅವರು, ಯೋಜನೆಯಡಿ ಸಲ್ಲಿಕೆಯಾದ ಅರ್ಜಿಗಳಿಗೆ ತ್ವರಿತ ಸಾಲ ನೀಡುವಂತೆ ತಿಳಿಸಿದ್ದಾರೆ.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠಿತವಾಗಿದೆ. ಸಾಲ ಮಂಜೂರಾತಿ ವಿಳಂಬವಾಗುತ್ತಿದೆ. ಈ ಬಗ್ಗೆ ಗಮನಹರಿಸಬೇಕು. ರಾಜ್ಯದಲ್ಲಿ 53,695 ಅರ್ಜಿಗಳಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಸಾಲ ಮಂಜೂರಾತಿ ನೀಡಲಾಗಿದೆ. ಬ್ಯಾಂಕ್ ಗಳಲ್ಲಿ ಯೋಜನೆಗಳಿಗೆ ಸಾಲ ಮಂಜೂರಾತಿ ವಿಳಂಬವಾಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳುವಂತೆ ಬ್ಯಾಂಕರ್ ಗಳಿಗೆ ತಿಳಿಸಿದ್ದಾರೆ.
ಪ್ರಧಾನಮಂತ್ರಿ ಸ್ವನಿಧಿ ಯೋಜನೆಯು ಜುಲೈ 2020 ರಿಂದ ಜಾರಿಗೆ ಬಂದಿದ್ದು ವಸತಿ ಮತ್ತು ನಗರಾಭಿವೃದ್ಧಿ ಸಚಿವಾಲಯದಿಂದ ಅನುದಾನ ಬಿಡುಗಡೆ ಮಾಡಲಾಗುವುದು. ಪಿಎಂ ಸ್ವನಿಧಿ ಯೋಜನೆಯಡಿ ಬೀದಿ ವ್ಯಾಪಾರಿಗಳಿಗೆ 10,000 ರೂ. ದುಡಿಯುವ ಬಂಡವಾಳ ಸೌಲಭ್ಯದೊಂದಿಗೆ ನಿಯಮಿತ ಪಾವತಿಗೆ ಶೇಕಡ 7 ರಷ್ಟು ಬಡ್ಡಿದರ ಪ್ರೋತ್ಸಾಹಕ, ಡಿಜಿಟಲ್ ವಹಿವಾಟಿಗೆ ಪುರಸ್ಕಾರ ನೀಡಲಾಗುವುದು.
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ನೀಡುವ ಯೋಜನೆಯಲ್ಲಿ ವ್ಯಾಪಾರಿಗಳಿಗೆ ಅನುಕೂಲವಾಗುವ ವೇಳಾಪಟ್ಟಿ ನಿಗದಿಪಡಿಸಿ ಸಾಲ ವಿತರಿಸಲು ತಿಳಿಸಲಾಗಿದೆ. ಸಭೆಯಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ವಸತಿ ಸಚಿವ ವಿ. ಸೋಮಣ್ಣ ಮೊದಲಾದವರು ಇದ್ದರು.