ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ನಡುವೆ ರೈತರು ಸಂಕಷ್ಟದಲ್ಲಿದ್ದಾರೆ. ಇದೇ ಹೊತ್ತಲ್ಲಿ ಸಾಲ ಮರು ಪಾವತಿಸುವಂತೆ ಬ್ಯಾಂಕುಗಳು ನೋಟಿಸ್ ನೀಡತೊಡಗಿವೆ.
ರಾಜ್ಯದ ಬಹುತೇಕ ಭಾಗದಲ್ಲಿ ಬರಗಾಲ ಇರುವುದರಿಂದ ಸರ್ಕಾರ 200ಕ್ಕೂ ಅಧಿಕ ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದೆ. ಮಳೆ ಇಲ್ಲದೆ ತೀವ್ರ ಸಂಕಷ್ಟದಲ್ಲಿರುವ ರೈತರಿಗೆ ಬ್ಯಾಂಕ್ ಸಾಲ ಮರುಪಾವತಿಸುವಂತೆ ನೋಟಿಸ್ ಕಳುಹಿಸಲಾಗುತ್ತಿದೆ.
ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದ ರೈತ ಮಹದೇವಪ್ಪ ಅವರಿಗೆ ಬೆಳೆ ಸಾಲ ಮರುಪಾವತಿಸಲು ಬ್ಯಾಂಕ್ ನಿಂದ ನೋಟಿಸ್ ಬಂದಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಪುತ್ರ ಜಿಲ್ಲಾಧಿಕಾರಿಗೆ ಪತ್ರ ಬರೆದು ಕಡ್ಡಾಯವಾಗಿ ಸಾಲ ಮರುಪಾವತಿಸಲು ಬ್ಯಾಂಕ್ ಸಿಬ್ಬಂದಿ ಹೇಳಿದ್ದರಿಂದ ತಂದೆ ಪ್ರಜ್ಞೆ ತಪ್ಪಿದ್ದಾರೆ. ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಈಗಾಗಲೇ ಮೂರು ಲಕ್ಷ ರೂ. ವೆಚ್ಚ ಮಾಡಿದ್ದು, ಮಧ್ಯಪ್ರವೇಶಿಸಿ ಸಾಲ ಮನ್ನಾ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದ್ದಾರೆ.
ಬ್ಯಾಂಕರ್ ಗಳ ಸಭೆ ಕರೆದು ರೈತರ ಸಾಲ ಮರುಪಾವತಿ ಅವಧಿ ವಿಸ್ತರಿಸಬೇಕೆಂದು ಸರ್ಕಾರ ಸೂಚನೆ ನೀಡಿದೆ. ಹೀಗಿದ್ದರೂ ಸಂಕಷ್ಟದಲ್ಲಿರುವ ರೈತರಿಗೆ ಸಾಲ ಕಟ್ಟುವಂತೆ ಬ್ಯಾಂಕುಗಳಿಂದ ನೋಟಿಸ್ ನೀಡಲಾಗುತ್ತಿದೆ ಎಂದು ಹೇಳಲಾಗಿದೆ.