
ಬೆಂಗಳೂರು: ಗ್ರಾಮೀಣ ಜನತೆಗೆ ಅವಶ್ಯಕವಾಗಿರುವ ವಿವಿಧ ಸೇವೆಗಳನ್ನು ಒಂದೇ ಸೂರಿನಡಿ ಕಲ್ಪಿಸಲು ಗ್ರಾಮ ಪಂಚಾಯಿತಿಗಳ ಬಾಪೂಜಿ ಸೇವಾ ಕೇಂದ್ರಗಳನ್ನು ಆರಂಭಿಸಲಾಗಿದೆ.
ಈ ಕೇಂದ್ರಗಳ ಮೂಲಕ ಗ್ರಾಮೀಣ ಜನರಿಗೆ ಅವಶ್ಯಕವಿರುವ 22 ಸೇವೆಗಳನ್ನು ನೀಡಲಾಗುತ್ತಿದ್ದು, ಇವುಗಳೊಂದಿಗೆ ಹೊಸದಾಗಿ 44 ಅಗತ್ಯ ಸೇವೆಗಳನ್ನು ನೀಡಲಾಗುವುದು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಇನ್ನು 66 ಸರ್ಕಾರಿ ಸೇವೆಗಳು ಸಿಗಲಿವೆ.
ಗ್ರಾಮೀಣಾಭಿವೃದ್ಧಿ ಇಲಾಖೆ ಸೇವೆಗಳ ಜೊತೆಗೆ ಇನ್ನು ಮುಂದೆ ಗ್ರಾಮೀಣ ಜನರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಂದಾಯ, ಕಾರ್ಮಿಕ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಯನ್ನು ಕೂಡ ಪಡೆದಬಹುದು.
ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯವಸ್ಥೆ ಕಲ್ಪಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇವೆಗಳಿಗೆ ಚಾಲನೆ ನೀಡಿದ್ದು, ಗ್ರಾಮೀಣ ಜನತೆ ಸೌಲಭ್ಯ ಬಳಸಿಕೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಪ್ರತಿ ಹೋಬಳಿಯು 6-7 ಗ್ರಾಮ ಪಂಚಾಯಿತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20 – 50 ಸಾವಿರ ಜನರು ಸರ್ಕಾರಿ ಸೇವೆಗಳನ್ನು ಪಡೆದುಕೊಳ್ಳಲು ಹೋಬಳಿ ಕೇಂದ್ರಕ್ಕೆ ಹೋಗಬೇಕಿತ್ತು, ಇದರಿಂದ ಜನರಿಗೆ ತೊಂದರೆಯಾಗಿತ್ತು.
ರಾಜ್ಯದ ಗ್ರಾಮೀಣ ಭಾಗಗಳ ಜನತೆಗೆ ಹೆಚ್ಚಿನ ಅನುಕೂಲ ಒದಗಿಸುವ ನಿಟ್ಟಿನಲ್ಲಿ ನಾಡಕಚೇರಿಗಳಲ್ಲಿ, ಅಟಲ್ ಜನಸ್ನೇಹಿ ಕೇಂದ್ರಗಳಲ್ಲಿ ಲಭ್ಯವಿದ್ದ 44 ಸರ್ಕಾರಿ ಸೇವೆಗಳು ಇನ್ನು ಮುಂದೆ ಗ್ರಾಮ ಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯವಾಗಲಿದೆ.
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರು ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಗಳ ಸೇವೆಗಳ ಜೊತೆಗೆ ಆದಾಯ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ ಆಧಾರ್ ಸೇವೆಗಳ ಸೌಲಭ್ಯವನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲಿ ರಾಜ್ಯದ ಜನ ಪಡೆಯಬಹುದಾಗಿದೆ.
ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.