ರಾಯಚೂರು: ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಸಮಾವೇಶ ನಡೆದ ಬೆನ್ನಲ್ಲೇ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಪಂಚಮಸಾಲಿ ಮೀಸಲಾತಿಗಾಗಿ ಮತ್ತೆ ಹೋರಾಟ ತೀವ್ರಗೊಳಿಸಿದ್ದು, ನಾಳೆ ರಾಯಚೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ.
ಪಂಚಮಸಾಲಿ 2ಎ ಮೀಸಲಾತಿಗೆ ಹಾಗೂ ಲಿಂಗಾಯಿತರಿಗೆ ಓಬಿಸಿ ಮೀಸಲಾತಿಗೆ ಒತ್ತಾಯಿಸಿ ನಾಳೆ ಡಿ.24ರಂದು ರಾಯಚೂರಿನ ಯರಡೋಣದಲ್ಲಿ ಜಿಲ್ಲಾ ಮಟ್ಟದ ಸಮಾವೇಶ ಹಮ್ಮಿಕೊಂಡಿದ್ದಾರೆ.
ಯರಡೋಣಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಲಿದ್ದು, ಹೆದ್ದಾರಿ ತಡೆಗೆ ಕರೆ ಕೊಟ್ಟಿದ್ದಾರೆ.
ಸಮಾವೇಶದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಶಾಸಕ ವಿಜಯಾನಂದ ಕಾಶಪ್ಪನವರ್, ಸಂಸದ ಸಂಗಣ್ಣ ಕರಡಿ ಮೊದಲಾದವರು ಭಾಗವಹಿಸಲಿದ್ದಾರೆ. ಮೀಸಲಾತಿ ವಿಚಾರವಾಗಿ ಬೆಳಗಾವಿ ಅಧಿವೇಶನದ ಬಳಿಕ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಸಭೆ ಕರೆಯುವುದಾಗಿ ಹೇಳಿದ್ದರು. ಈ ನಿಟ್ಟಿನಲ್ಲಿ ಸರ್ಕಾರದ ಗಮನ ಸೆಳೆಯಲು ಮೀಸಲಾತಿಗಾಗಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.