
ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ಬೆಂಗಳೂರಿನ ಜಯನಗರ ಮೆಟ್ರೋ ಸ್ಟೇಷನ್ ಬಳಿ ಈ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಾಮನಗರ ಜಿಲ್ಲೆಯ ಕಲ್ಲಿಗೌಡನದೊಡ್ಡಿ ನಿವಾಸಿ ಜಯಲಿಂಗ (26) ಮೃತರು. ಕಸದಲಾರಿಯನ್ನು ಅವೈಜ್ಞಾನ್ನಿಕವಾಗಿ ರಸ್ತೆಯಲ್ಲಿಯೇ ಪಾರ್ಕ್ ಮಾಡಲಾಗಿತ್ತು. ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಕಸದ ಲಾರಿಗೆ ಡಿಕ್ಕಿಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಬೈಕ್ ಸಮೇತವಾಗಿ ಕಸದ ಲಾರಿ ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ.
ಮೂರು ತಾಸು ಕಾರ್ಯಾಚರಣೆ ನಡೆಸಿ ಪೊಲೀಸರು ಮೃತದೇಹವನ್ನು ಹೊರತೆಗೆದಿದ್ದಾರೆ. ಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲಿ ಘಟನೆ ನಡೆದಿದೆ. ಮೃತ ಜಯಲಿಂಗ ಬನ್ನೇರುಘಟ್ಟ ರಸ್ತೆಯಲ್ಲಿರುವ ಪೈ ಶೋ ರೂಂ ನಲ್ಲಿ ಕೆಲಸ ಮಾಡುತ್ತಿದ್ದರು. ಜೆ.ಪಿ.ನಗರದಲ್ಲಿ ಪತ್ನಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದೀಗ ಅಪಘಾತದಲ್ಲಿ ಬಲಿಯಾಗಿದ್ದು, ಕುಟುಂಬದ ಆಕ್ರಂದನ ಮುಗಿಲುಮುಟ್ಟಿದೆ.