ವಿದೇಶಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರಾಜ್ಯ ಸರ್ಕಾರ ಕೂಡ ಈ ನಿಟ್ಟಿನಲ್ಲಿ ಕ್ರಮವಹಿಸಿದೆ. ಮೆಟ್ರೋ ರೈಲು, ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದ್ದು, ಮಾಸ್ಕ್ ಧರಿಸದಿದ್ದರೆ ಪ್ರಯಾಣಕ್ಕೆ ಅನುಮತಿ ನೀಡಲಾಗುತ್ತಿಲ್ಲ.
ಇದರ ಮಧ್ಯೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮಾರ್ಷಲ್ ಗಳು ಮೈಕ್ ಮೂಲಕ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಕುರಿತು ಜಾಗೃತಿ ಮೂಡಿಸುತ್ತಿದ್ದಾರೆ. ಯಶವಂತಪುರ ಸೇರಿದಂತೆ ಜನಸಂದಣಿ ಹೆಚ್ಚಿರುವ ಪ್ರದೇಶಗಳಲ್ಲಿ ಈ ಕಾರ್ಯ ನಡೆಯುತ್ತಿದ್ದು, ಕೊರೊನಾ 2ನೇ ಅಲೆಯಲ್ಲಿ ತೀವ್ರ ಹೊಡೆತ ಅನುಭವಿಸಿರುವ ಸಾರ್ವಜನಿಕರು ಪೂರಕವಾಗಿ ಸ್ಪಂದಿಸುತ್ತಿದ್ದಾರೆ.
ಈಗ ಕಂಡು ಬಂದಿರುವ ಬಿಎಫ್ 7 ರೂಪಾಂತರಿ ಅಷ್ಟೇನೂ ಆತಂಕಕಾರಿಯಲ್ಲ ಎಂದು ಹೇಳಲಾಗುತ್ತಿದ್ದರೂ ಸಹ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಹೀಗಾಗಿ ಮಾಸ್ಕ್ ಧರಿಸುವುದು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಅದರಲ್ಲೂ ವೃದ್ಧರು, ಕಾಯಿಲೆಯ ಇತಿಹಾಸ ಹೊಂದಿರುವವರು ಸಾಕಷ್ಟು ಮುಂಜಾಗ್ರತೆ ವಹಿಸುವುದು ಒಳಿತು ಎಂದು ಅಭಿಪ್ರಾಯ ಪಟ್ಟಿದ್ದಾರೆ.