ತುಮಕೂರು: ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಮೇ ಮೊದಲ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ನಿನ್ನೆ ತಿಪಟೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಗುಲಾಬಿ ಹೂವು ನೀಡಿ ಶುಭ ಹಾರೈಸಿ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಿಕೊಟ್ಟರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ ತಿಂಗಳ ಮೊದಲ ವಾರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಾಗುವುದು. ರಾಜ್ಯದ 1109 ಕೇಂದ್ರಗಳಲ್ಲಿ ಮೊದಲ ದಿನ ಎರಡು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಸಲ ವಿದ್ಯಾರ್ಥಿ ಸ್ನೇಹಿ ಪ್ರಶ್ನೆ ಪತ್ರಿಕೆ ನೀಡಲಾಗಿದೆ. ಮೊದಲ ದಿನದ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದರು.
ಚಿಕ್ಕೋಡಿ ಮತ್ತು ಯಾದಗಿರಿ ಪರೀಕ್ಷಾ ಕೇಂದ್ರಗಳಲ್ಲಿ ನಕಲು ಮಾಡಲು ಮುಂದಾಗಿ ಸಿಕ್ಕಿಬಿದ್ದ ವಿದ್ಯಾರ್ಥಿಗಳಿಬ್ಬರನ್ನು ಡಿಬಾರ್ ಮಾಡಲಾಗಿದೆ. ಬೆಂಗಳೂರಿನ ಮಲ್ಲೇಶ್ವರಂನ ಕಾಲೇಜು ಒಂದರಲ್ಲಿ ವಿದ್ಯಾರ್ಥಿನಿಯೊಬ್ಬರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಆಗಮಿಸಿದ್ದು, ಪ್ರಾಂಶುಪಾಲರು ಅವಕಾಶ ಇಲ್ಲದಿರುವುದನ್ನು ಸ್ಪಷ್ಟಪಡಿಸಿದಾಗ ಹಿಜಾಬ್ ತೆಗೆದು ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 29 ರವರೆಗೆ ಪರೀಕ್ಷೆ ನಡೆಯಲಿದ್ದು, ಮೇ ತಿಂಗಳ ಮೊದಲ ವಾರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.