ಬೆಂಗಳೂರು: ರಾಜ್ಯದಲ್ಲಿ ಈ ವರ್ಷವೇ ಎನ್ಇಪಿ ಜಾರಿಗೊಳಿಸಲಾಗುತ್ತದೆ. ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ವಿ. ಸೋಮಣ್ಣ ಪ್ರತಿಷ್ಠಾನ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಮತ್ತು ಎಸ್ಸೆಸ್ಸೆಲ್ಸಿಯಲ್ಲಿ ಶೇ 85ಕ್ಕಿಂತ ಹೆಚ್ಚು ಅಂಕ ಪಡೆದ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸರ್ಕಾರಿ, ಅನುದಾನಿತ ಮತ್ತು ಬಿಬಿಎಂಪಿ ಶಾಲೆಗಳ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಮಹದಾಸೆಯಂತೆ ಭಾರತೀಯ ಶಿಕ್ಷಣ ಪದ್ಧತಿಯಲ್ಲಿ ಮತ್ತು ಮಾತೃಭಾಷೆಯಲ್ಲಿ ಶಿಕ್ಷಣ ನೀಡಲಾಗುವುದು. ನೂತನ ಶಿಕ್ಷಣ ನೀತಿಯನ್ನು ಮೋದಿಯವರ ಮಹತ್ವಕಾಂಕ್ಷಿಯಂತೆ ರೂಪಿಸಲಾಗಿದ್ದು, ಈ ವರ್ಷದಿಂದ ಪೂರ್ವ ಪ್ರಾಥಮಿಕ ಶಿಕ್ಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮ ರೂಪಿಸಲು ಕೇಂದ್ರ ಸರ್ಕಾರ ವಿಶೇಷ ಗಮನ ಹರಿಸಿದೆ ಎಂದು ತಿಳಿಸಿದ್ದಾರೆ.