ರಾಜಸ್ಥಾನದ ಜಲೋರ್ ಜಿಲ್ಲೆಯ ಖಾಸಗಿ ಶಾಲೆಯೊಂದರಲ್ಲಿ ಕುಡಿಯುವ ನೀರಿನ ಕೊಡ ಮುಟ್ಟಿದ್ದಕ್ಕಾಗಿ ಶಿಕ್ಷಕರಿಂದ ಥಳಿತಕ್ಕೆಒಳಗಾದ ದಲಿತ ಸಮುದಾಯದ 9 ವರ್ಷದ ಬಾಲಕ ಶನಿವಾರ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜಸ್ಥಾನದ ಜಲೋರ್ ಜಿಲ್ಲೆಯ ಸುರಾನಾ ಗ್ರಾಮದ ಖಾಸಗಿ ಶಾಲೆಯಲ್ಲಿ ಜುಲೈ 20 ರಂದು ಈ ಘಟನೆ ನಡೆದಿದೆ. ಗಾಯಗೊಂಡ ಮಗು ಇಂದ್ರ ಮೇಘವಾಲ್ ನನ್ನು ಚಿಕಿತ್ಸೆಗಾಗಿ ಅಹಮದಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು ಶಿಕ್ಷಕ ಚೈಲ್ ಸಿಂಗ್(40) ಅವರನ್ನು ಬಂಧಿಸಿದ್ದಾರೆ. ಕೊಲೆ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ದೌರ್ಜನ್ಯ ತಡೆ) ಕಾಯ್ದೆಯ ಸೆಕ್ಷನ್ ಗಳ ಅಡಿಯಲ್ಲಿ ಶಿಕ್ಷಕನ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗದಂತೆ ತಡೆಯಲು ಪ್ರದೇಶದಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.
ಘಟನೆಯ ಬಗ್ಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ದುಃಖ ವ್ಯಕ್ತಪಡಿಸಿದ್ದಾರೆ. ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ರಾಜ್ಯ ಶಿಕ್ಷಣ ಇಲಾಖೆಯು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದೆ.