
ಬೆಂಗಳೂರು: ಬೇಡ ಜಂಗಮ ಸಮುದಾಯಕ್ಕೆ ಜಾತಿ ಪ್ರಮಾಣ ಪತ್ರ ನೀಡುವ ಸಮಸ್ಯೆ ಬಗೆಹರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ವಕೀಲ ಬಿ.ಡಿ. ಹಿರೇಮಠ ನೇತೃತ್ವದಲ್ಲಿ ಬೇಡ ಜಂಗಮ ಸಮುದಾಯದ ನಿಯೋಗ ಸಿಎಂ ಭೇಟಿಯಾಗಿ ಮನವಿ ಸಲ್ಲಿಸಿದ್ದು, ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ಬೇಡ ಜಂಗಮರ ಜಾತಿ ಪ್ರಮಾಣ ಪತ್ರ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಅಡ್ವೊಕೇಟ್ ಜನರಲ್ ಜೊತೆಗೆ ಚರ್ಚಿಸಿ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ನಿವಾರಿಸಲಾಗುವುದು. ಅ. 18 ರಂದು ಕೈಗೊಂಡಿರುವ ಪ್ರತಿಭಟನೆ ಹಿಂಪಡೆಯಬೇಕು ಎಂದು ತಿಳಿಸಿದ್ದಾರೆ.
ಬೇಡ ಜಂಗಮ ಸಮುದಾಯಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿದ್ದು, ಇದನ್ನು ನಿವಾರಿಸಿ ಕಾನೂನು ರೀತಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕೆಂದು ನಿಯೋಗ ಮಾಡಿದ ಮನವಿಗೆ ಸಿಎಂ ಅಗತ್ಯಕ್ರಮದ ಭರವಸೆ ನೀಡಿದ್ದಾರೆ.