ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ ನಡೆಯುತ್ತಿದ್ದು, ಜೈ ಬಾಪು, ಜೈ ಭೀ , ಜೈ ಸಂವಿಧಾನ್ ಎಐಸಿಸಿ ಬೃಹತ್ ಸಮಾವೇಶ ನಡೆಯುತ್ತಿದೆ. ಆದರೆ ಲೋಕಸಭಾ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಈ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.
ಅನಾರೋಗ್ಯದ ಕಾರಣದಿಂದಾಗಿ ರಾಹುಲ್ ಗಾಂಧಿ ಬೆಳಗಾವಿಯ ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
1924ರಲ್ಲಿ ಬೆಳಗಾವಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಕಾಂಗ್ರೆಸ್ ಅಧಿವೇಶನ ನಡೆಸಿದ್ದರು. ಇದರ ನೆನಪಿನಾರ್ಥವಾಗಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ಆಯೋಜಿಸಲಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಹುಷಾರಿಲ್ಲದ ಕಾರಣ ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿದರು.
ರಾಹುಲ್ ಗಾಂಧಿಯವರು ಸಮಾವೇಶದಿಂದ ದೂರ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ ಎಂದು ಪ್ರಶ್ನಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕ ಗಾಂಧಿ, ಕೆ.ಸಿ.ವೇಣುಗೋಪಾಲ್, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಸೇರಿ ಹಲವು ನಾಯಕರು ಆಗಮಿಸಿದ್ದಾರೆ ಎಂದು ತಿಳಿಸಿದರು.