ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬೆನ್ನಲ್ಲೇ ಮಹಾರಾಷ್ಟ್ರದ ಪುಂಡಾಟದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಸಿಡಿದೆದ್ದಿದ್ದು, ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.
ಹಿರೇಬಾಗೇವಾಡಿ ಟೋಲ್ ಬಳಿ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಕರವೇ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದು, ಮಹಾರಾಷ್ಟ್ರದ ಲಾರಿಗಳ ಮೇಲೆ ಮಸಿ ಬಳಿದು, ಕಲ್ಲುತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರವೇ ರೋಷಾಗ್ನಿಗೆ ಮಹಾರಾಷ್ಟ್ರ ನೋಂದಣಿಯಿರುವ 6 ಲಾರಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಹಲವು ವಾಹನಗಳಿಗೆ ಮಸಿ ಬಳಿದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಕೆಲ ಕರವೇ ಕಾರ್ಯಕರ್ತರು ಮಹಾರಾಷ್ಟ್ರ ನೋಂದಣಿಯಿರುವ ಲಾರಿಗಳ ಮೇಲೆ ಹತ್ತಿ ಕನ್ನಡ ಬಾವುಟ ಪ್ರದರ್ಶಿಸಿ, ಧರಣಿ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48 ಅಕ್ಷರಶಃ ರಣಾಂಗಣವಾಗಿ ಮಾರ್ಪಟ್ಟಿದೆ.
ಕರವೇ ಕಾರ್ಯಕರ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ. ಇನ್ನೊಂದೆಡೆ ನೂರಾರು ಕರವೇ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ ಸೇರಿದಂತೆ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.