ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಾಡದ್ರೋಹಿ ಎಂಇಎಸ್ ಗೆ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಶಾಕ್ ಕೊಟ್ಟಿದ್ದಾರೆ. ಈ ಬಾರಿ ಬೆಳಗಾವಿಯಲ್ಲಿ ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ಧತೆಗಳು ನಡೆದಿವೆ. ಎಂಇಎಸ್ ಗೆ ಕರಾಳದಿನ ಆಚರಣೆ ನಡೆಸಲು ಯಾವುದೇ ರೀತಿ ಅವಕಾಶವಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಕುಂದಾನಗರಿ ಬೆಳಗಾವಿಯಲ್ಲಿ ರಾಜ್ಯೋತ್ಸವವನ್ನು ಈಬಾರಿ ವಿಜೃಂಭಣೆಯಿಂದ ಆಚರಿಸಲಾಗುವುದು. ಎಂಇಎಸ್ ಕರಾಳದಿನ ಆಚರಿಸಲು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷತ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪೂರ್ವಬಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು, ನ.1ರಂದು ದೀಪಾವಳಿ ಹಬ್ಬದ ದಿನವೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗುವುದು. ಇದಕ್ಕೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಡಿಕೊಳ್ಳಬೇಕು ಎಂದು ಸೂಚಿಸಿದರು.
ಈ ಬಾರಿ ರಾಜ್ಯೋತ್ಸವ ಮೆರವಣಿಗೆಗೆ ಆಗಮಿಸುವ ಮಹಿಳೆಯರಿಗಾಗಿ ಪ್ರತ್ಯೇಕ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ಬೆಳಗಾವಿ ಜಿಲ್ಲೆಯನ್ನು ಕರ್ನಾಟಕದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹೋರಾಟ ನಡೆಸಿರುವ ಮಹನೀಯರ ಭಾವಚಿತ್ರಗಳನ್ನು ಮೆರವಣಿಗೆ ಮಾರ್ಗದುದ್ದಕ್ಕೂ ಅಳವಡಿಸಲಾಗುವುದು. ರಾಣಿ ಚನ್ನಮ್ಮ ಮೂರ್ತಿಗೆ ಆಕಾಶದಿಂದ ಪುಷ್ಪವೃಷ್ಟಿಗೈಯ್ಯುವ ವ್ಯವಸ್ಥೆ ಮಾಡಲಾಗುವುದು ಎಂದರು.
ಎಂಇಎಸ್ ಗೆ ಕರಾಳದಿನ ಆಚರಣೆಗೆ ಯಾವುದೇ ಅವಕಾಶವಿಲ್ಲ. ಅಂತಹ ಕೆಲಸಕ್ಕೆ ಮುಂದಾದರೆ ಪೊಲೀಸರು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಸಿದರು.