ಬೆಳಗಾವಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿಯೂ ಧ್ವಜ ವಿವಾದ ಆರಂಭವಾಗಿದೆ. ಬೆಳಗಾವಿಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದಲ್ಲಿ ಹನುಮ ಧ್ವಜ ತೆರವು ಮಾಡಿದ ಬೆನ್ನಲ್ಲೇ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಎಂ.ಕೆ.ಹುಬ್ಬಳ್ಳಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಭಗವಾ ಧ್ವಜ ಹಾರಿಸಲಾಗಿತ್ತು. ಇದನ್ನು ಪಟ್ಟಣ ಪಂಚಾಯ್ತಿ ಸಿಬ್ಬಂದಿ ತೆರವು ಮಾಡಿದ್ದಾರೆ. ಭಗವಾ ಧ್ವಜ ತೆರವು ಮಾಡುತ್ತಿದ್ದಂತೆ ಗ್ರಾಮದ ಯುವಕರು, ಹಿಂದೂ ಪರ ಸಂಘಟನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಅದೇ ಜಾಗದಲ್ಲಿ ಭಗವಾ ಧ್ವಜ ಹಾರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಈ ಬೆಳವಣಿಗೆ ಬೆನ್ನಲ್ಲೇ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಎಸ್ ಪಿ ಭೀಮಾಶಂಕರ್ ಗುಳೇದ್ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿದ ಭೀಮಾಶಂಕರ್ ಗುಳೇದ್, ಸಾರ್ವಜನಿಕ ಸ್ಥಳಗಳಲ್ಲಿ ಭಗವಾ ಧ್ವಜ ಹಾರಿಸಲು ಅವಕಾಶವಿಲ್ಲ. ಸರ್ಕಾರ ಹಾಗೂ ಅಧಿಕಾರಿಗಳ ತೀರ್ಮಾನದಂತೆ ಧ್ವಜ ತೆರವು ಮಾಡಲಾಗಿದೆ. ಧ್ವಜ ತೆರವು ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ್ದೇ ಗಲಾಟೆಗೆ ಕಾರಣವಾಗಿದೆ. ಅನಗತ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ವಿವಾದವೆಬ್ಬಿಸುವ ಕೆಲಸ ಮಾಡಲಾಗುತ್ತಿದೆ. ತಪ್ಪು ಯಾರೇ ಮಾಡಿದರೂ ಕ್ರಮ ಕೈಗೊಳ್ಳಲಾಗುವುದು. ಶಾಂತಿಯುತವಾಗಿದ್ದ ಎಂ.ಕೆ.ಹುಬ್ಬಳ್ಳಿಯಲ್ಲಿ ವಿವಾದ ಆರಂಭಿಸುವ ಕೆಲಸ ಮಾಡಲಾಗುತ್ತಿದೆ. ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಹಾಗೂ ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.