ಬೆಳಗಾವಿ: 2ಎ ಮೀಸಲಾತಿಗಾಗಿ ಆಗ್ರಹಿಸಿ ಪಂಚಮಸಾಲಿ ಸಮುದಾಯದವರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪ್ರತಿಭಟನೆ ನಡೆಸುತ್ತಿದ್ದ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಸಮುದಾಯದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಬೃಹತ್ ಪ್ರತಿಭಟನಾ ಸಮಾವೇಶ ನಡೆಸಿದ್ದು, ಸಮಾವೇಶದ ಬಳಿಕ ಪ್ರತಿಭಟನಾಕಾರರು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬ್ಯಾರಿಕೇಡ್ ಗಳನ್ನು ತಳ್ಳಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸ್ಥಳದಲ್ಲಿ ನಿಲ್ಲಿಸಿದ್ದ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಎಂಎಲ್ ಸಿ ಯೊಬ್ಬರಿಗೆಸೇರಿದ ಕಾರು, ಪೊಲೀಸ್ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ವಾಹನಗಳ ಗಾಜು ಪುಡಿಪುಡಿಯಾಗಿವೆ.
ಇನ್ನೊಂದೆಡೆ ಸ್ವಾಮೀಜಿ ನೇತೃತ್ವದಲ್ಲಿ ಸುವರ್ಣಸೌಧದ ಬಳಿ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡಿದೆ. ಪ್ರತಿಭಟನೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್ ಮೊದಲಾದವರು ಬೆಂಬಲ ನೀಡಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸರು ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶಾಸಕರಾದ ಯತ್ನಾಳ್, ಅರವಿಮ್ದ ಬೆಲ್ಲದ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.