ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 19 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ. ಡಿಸೆಂಬರ್ 19 ರಿಂದ 30ರವರೆಗೆ 10 ದಿನಗಳ ಕಾಲ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸಚಿವ ಡಾ.ಕೆ. ಸುಧಾಕರ್ ಮಾಹಿತಿ ನೀಡಿದ್ದಾರೆ.
100 ಪಿ.ಹೆಚ್.ಸಿ. ಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುವುದು. ತುಮಕೂರಿನಲ್ಲಿ 100 ಹಾಸಿಗೆಗಳ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಿಸಲಾಗುತ್ತದೆ. ತುಮಕೂರಿನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ನರ್ಸಿಂಗ್ ಕಾಲೇಜು ನಿರ್ಮಾಣ ಮಾಡಲಾಗುವುದು.
ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಆರಂಭಿಸಲಾಗುವುದು. ಎನ್.ಹೆಚ್.ಎಂ. ಫಂಡ್ ನಲ್ಲಿ ಆಸ್ಪತ್ರೆಗಳ ಮೇಲ್ದರ್ಜೆಗೇರಿಸಲು ನಿರ್ಧಾರ ಕೈಗೊಳ್ಳಲಾಗಿದೆ.
7 ಆಸ್ಪತ್ರೆಗಳಿಗೆ 158 ಕೋಟಿ ರೂ. ಅನುದಾನ ನೀಡಲು ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಸಂಪುಟ ನಿರ್ಧಾರ ಕೈಗೊಂಡಿದೆ. ತರೀಕೆರೆಯಲ್ಲಿ 100 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುತ್ತದೆ.
ಲಿಂಗಸಗೂರು, ಹರಿಹರದಲ್ಲಿ ತಲಾ 50 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಿಸಲಾಗುವುದು. ಗೋಕಾಕ್ ನಲ್ಲಿ 200 ಹಾಸಿಗೆ ಸಾಮರ್ಥ್ಯದ ತಾಯಿ, ಮಕ್ಕಳ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು.
600 ಕೋಟಿ ರೂಪಾಯಿ ವೆಚ್ಚದಲ್ಲಿ ರಾಮನಗರದಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿವಿ ಕಟ್ಟಡ ನಿರ್ಮಾಣ ಮಾಡಲಾಗುವುದು.
ಗೌರಿಬಿದನೂರಿನಲ್ಲಿ ನೂತನ ಕೋರ್ಟ್ ಸಂಕೀರ್ಣ ನಿರ್ಮಾಣ ಮಾಡಲಾಗುವುದು. ನ್ಯಾಯಾಲಯ ಕಟ್ಟಡ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ ಅನುಮೋದನೆ ನೀಡಿದೆ. ಧಾರವಾಡ -ಹಳಿಯಾಳ ರಸ್ತೆ ಕೆಳ ಸೇತುವೆ ನಿರ್ಮಾಣಕ್ಕೆ ಸಂಪುಟ ಸಭೆಯಲ್ಲಿ ಅನುಮತಿ ನೀಡಲಾಗಿದೆ.
100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲಾಗಿದ್ದು, ಈಗಾಗಲೇ 43 ಪಿ.ಹೆಚ್.ಸಿ.ಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಇಎಸ್ಐ ಆಸ್ಪತ್ರೆಗಳಿಗೆ ಸುಮಾರು 44 ಕೋಟಿ ರೂ. ವೆಚ್ಚದಲ್ಲಿ ಉಪಕರಣಗಳ ಖರೀದಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.