ಬೆಳಗಾವಿ: ಒಂದೆಡೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದರೆ. ಇನ್ನೊಂದೆಡೆ ಸರ್ಕಾರಕ್ಕೆ ಪ್ರತಿಭಟನೆಗಳ ಬಿಸಿ ತಟ್ಟಿದೆ. 9 ಗ್ರಾಮಗಳ ರೈತರು ಭೂಮಿ ಉಳಿವಿಗೆ ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ.
ಕಿತ್ತೂರಿನ ಕುಲವಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಗ್ರಾಮಗಳ ರೈತರು ಕುಟುಂಬ ಹಾಗೂ ದನಕರುಗಳ ಸಮೇತವಾಗಿ ಆಗಮಿಸಿ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ರೈತರ ಪ್ರತಿಭಟನೆಗೆ ಶಾಲಾ ಮಕ್ಕಳು ಸಾಥ್ ನೀಡಿದ್ದಾರೆ. ಚನ್ನಮ್ಮ ವೃತ್ತದಲ್ಲಿ ಧರಣಿ ಕುಳಿತಿರುವ ರೈತರು ಹಾಗೂ ವಿದ್ಯಾರ್ಥಿಗಳ ಮನವೊಲಿಕೆಗೆ ಪೊಲೀಸರು ಯತ್ನಿಸಿದರೂ ಸಾಧ್ಯವಾಗಿಲ್ಲ.
ಊಳುವವನೇ ಭೂಮಿಯ ಒಡೆಯ ಯೋಜನೆ ಅಡಿ ಭೂಮಿ ಪಡೆದಿದ್ದ ರೈತರು ಜಮೀನು ಹಕ್ಕು ಪತ್ರ ನೀಡುವಂತೆ ಹಾಗೂ ಮರು ಸಮೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕಂದಾಯ ಸಚಿವರು ಆಗಮಿಸುವಂತೆ ಪಟ್ಟು ಹಿಡಿದಿದ್ದಾರೆ.
ಚನ್ನಮ್ಮ ವೃತ್ತದಲ್ಲಿ ರಸ್ತೆ ತಡೆಯಿಂದ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು, ರೈತರು ಹಾಗೂ ರೈತ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.