ಶಿವಮೊಗ್ಗ: ಸಾಗರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.
ಬೇಳೂರು ಗೋಪಾಲಕೃಷ್ಣ ಅವರ ಮಾವ, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ತಮ್ಮ ಪುತ್ರಿ ರಾಜನಂದಿನಿ ಅವರಿಗೆ ಟಿಕೆಟ್ ಕೊಡುವಂತೆ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಎರಡು ಲಕ್ಷ ರೂಪಾಯಿ ನೀಡಿ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ್ದೇವೆ. ಇಷ್ಟು ವರ್ಷಗಳ ಕಾಲ ಪಕ್ಷಕ್ಕಾಗಿ ದುಡಿದಿದ್ದೇವೆ. ನಮ್ಮೊಂದಿಗೆ ಕನಿಷ್ಟ ಚರ್ಚೆ ಕೂಡ ನಡೆಸದೇ ಏಕಪಕ್ಷೀಯವಾಗಿ ಬೇಳೂರು ಗೋಪಾಲಕೃಷ್ಣ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ ಎಂದು ಕೆಲವು ಮುಖಂಡರಿಂದ ಆಕ್ಷೇಪ ವ್ಯಕ್ತವಾಗಿತ್ತು.
ಆದರೆ, ಚುನಾವಣೆ ಘೋಷಣೆಯಾಗುತ್ತಿದ್ದಂತೆ ಪರಿಸ್ಥಿತಿ ತಿಳಿಯಾಗುವ ಲಕ್ಷಣ ಕಂಡು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರು ತಮ್ಮ ಮಾವ, ಮಾಜಿ ಸಚಿವ ಕಾಗೋಡು ತಿಮ್ಮಪ್ಪನವರ ನಿವಾಸಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾಗೋಡು ತಿಮ್ಮಪ್ಪ, ಗೋಪಾಲಕೃಷ್ಣಗೆ ಕಾಂಗ್ರೆಸ್ ಟಿಕೆಟ್ ನೀಡಿರುವುದು ಸಂತಸ ತಂದಿದೆ. ನನ್ನ ಅಳಿಯನ ಗೆಲುವಿಗೆ ಕ್ಷೇತ್ರದ ಉದ್ದಗಲಕ್ಕೂ ಓಡಾಡುವ ಮೂಲಕ ಶಕ್ತಿ ಮೀರಿ ಗೆಲುವಿಗೆ ಪ್ರಯತ್ನಿಸುತ್ತೇನೆ ಎಂದು ತಿಳಿಸಿದ್ದಾರೆ. ಪಕ್ಷದ ವಿರುದ್ಧ ಬಂಡಾಯ ಎದ್ದಿರುವವರ ಕಾಲು ಹಿಡಿದಾದರೂ ಪಕ್ಷದ ಪರವಾಗಿ ಕೆಲಸ ಮಾಡಲು ಅವರ ಮನವೊಲಿಸುತ್ತೇನೆ. ವ್ಯಕ್ತಿಗಿಂತ ಪಕ್ಷವೇ ಮುಖ್ಯ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಕಾಗೋಡು ತಿಮ್ಮಪ್ಪ ಅವರು ಜೊತೆಯಲ್ಲಿ ಇರುವುದರಿಂದ ಆನೆ ಬಲಬಂದಂತಾಗಿದೆ. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳು ಸಹಜ. ಅದನ್ನು ಸರಿಪಡಿಸುತ್ತೇವೆ ಎಂದು ಬೇಳೂರು ಗೋಪಾಲಕೃಷ್ಣ ತಿಳಿಸಿದ್ದಾರೆ.