ಬೆಂಗಳೂರು: ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ರಾಜ್ಯ ಸರ್ಕಾರ ಬಿಬಿಎಂಪಿ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಫೋಟೊ ತೆಗೆದು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತರಲು ವ್ಯವಸ್ಥೆ ಕಲ್ಪಿಸಿದ್ದೇವೆ. ಟ್ರಾಫಿಕ್ ಪೊಲೀಸರು ಕೂಡ ರಸ್ತೆ ಗುಂಡಿ ಗುರುತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.
ತ್ವರಿತವಾಗಿ ಗುಂಡಿ ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ವರ್ಷ ನಮ್ಮ ರಾಜ್ಯ ಭೀಕರ ಬರಗಾಲವನ್ನು ಎದುರಿಸಿದ್ದು, ಈ ವರ್ಷ ಉತ್ತಮ ಮಳೆಯ ನಿರೀಕ್ಷೆ ಇದೆ. ಮಳೆ ಬರುವ ಮುನ್ನ ಪೂರ್ವಭಾವಿ ಸಿದ್ಧತೆ ಪರಿಶೀಲಿಸುತ್ತಿದ್ದೇವೆ. ಮಳೆಯಿಂದ ಸಮಸ್ಯೆಗೆ ತುತ್ತಾಗುವ ಪ್ರದೇಶ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದು, ಚರಂಡಿ, ಮಳೆನೀರುಗಾಲುವೆ ಸ್ವಚ್ಛಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಎಲ್ಲವನ್ನೂ ಈ ತಿಂಗಳಿನಲ್ಲೇ ಭರ್ತಿ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.