
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ನಿಗಮಗಳಲ್ಲಿ ಫಲಾನುಭವಿಗಳ ಆಯ್ಕೆಗೆ ಹಿಂದಿನ ವರ್ಷ ಸಲ್ಲಿಸಿದ ಅರ್ಜಿ ಮತ್ತು ದಾಖಲೆ ಪರಿಗಣಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯ ಯಶ್ ಪಾಲ್ ಸುವರ್ಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಪದೇಪದೇ ಅರ್ಜಿ ಸಲ್ಲಿಸಬೇಕಾದ ತೊಂದರೆಯನ್ನು ತಪ್ಪಿಸುವ ಉದ್ದೇಶದಿಂದ ಹಿಂದಿನ ವರ್ಷ ಸಲ್ಲಿಸಿದ ಅರ್ಜಿ ಮತ್ತು ದಾಖಲೆಗಳನ್ನು ಪರಿಗಣಿಸುವಂತೆ ಸೂಚಿಸಲಾಗಿದೆ. ವಿವಿಧ ಯೋಜನೆಗಳಲ್ಲಿ ಬಳಕೆಯಾಗದೆ ಉಳಿದ ಅನುದಾನವನ್ನು ಬೇಡಿಕೆ ಇರುವ ಯೋಜನೆಗಳಿಗೆ ವರ್ಗಾವಣೆ ಮಾಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.