
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಅಖೈರು ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂಬಿ.ಪಟೀಲ್ ತಿಳಿಸಿದ್ದಾರೆ.
ಮೂರು ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ 1.21 ಕೋಟಿ ರೂ ಶುಲ್ಕವನ್ನು ಪಾವತಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಎಂ.ಬಿ.ಪಾಟೀಲ್, ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಏರ್ ಪೋರ್ಟ್ ಸಲುವಾಗಿ ಗುರುತಿಸಲಾಗಿದೆ ಎಂದರು.
ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ ಜಾಮಿತೀಯ ಲಕ್ಷಣಗಳನ್ನು ವಿವರಿಸುವ ಚಿತ್ರ, ಭಾರತೀಯ ಸರ್ವೇ ಇಲಾಖೆಯ ನಕಾಶೆ, ಉದ್ದೇಶಿತ ನಿಲ್ದಾಣದಲ್ಲಿನ ಕಾರ್ಯಾಚರಣೆ ಸ್ವರೂಪ (ವಿಎಫ್ಆರ್/ಐಎಫ್ಆರ್) ತಿಳಿಸುವ ವಿವರ ಮುಂತಾದವನ್ನು ಸಿದ್ಧಪಡಿಸಿಕೊಂಡಿದ್ದೇವೆ ಎಂದು ವಿವರಿಸಿದ್ದಾರೆ.
ಬೆಂಗಳೂರಿನಲ್ಲಿ ಈಗ ಇರುವ ವಿಮಾನ ನಿಲ್ದಾಣದ ಮೇಲೆ ಅತೀವ ಒತ್ತಡವಿದೆ. ಇನ್ನೊಂದೆಡೆಯಲ್ಲಿ, 2033ಕ್ಕೆ ಸರಿಯಾಗಿ 150 ಕಿ.ಮೀ ವ್ಯಾಪ್ತಿಯಲ್ಲಿ ಮತ್ತೊಂದು ವಿಮಾನ ನಿಲ್ದಾಣ ಹೊಂದುವಂತಿಲ್ಲ ಎನ್ನುವ ಷರತ್ತು ಕೊನೆಗೊಳ್ಳಲಿದೆ. ಇವೆಲ್ಲವನ್ನೂ ದೃಷ್ಟಿಯಲ್ಲಿ ಇಟ್ಟುಕೊಂಡು ಎರಡನೆಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಿನಿಂದಲೇ ನಿರ್ಧರಿಸಲಾಗಿದೆ.2033ರ ಹೊತ್ತಿಗೆ ಅದು ಬಳಕೆಗೆ ಸಿದ್ಧವಾಗಬಹುದು ಎಂದು ಹೇಳಿದರು.
ಕೆಲವರು ತುಮಕೂರಿನ ಶಿರಾ ಸಮೀಪ ಉದ್ದೇಶಿತ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕೆಂದು ಆಗ್ರಹಿಸುತ್ತಿದ್ದಾರೆ. ಆದರೆ ಈ ಕಾರ್ಯಬೇಡಿಕೆ ಸಾಧುವಲ್ಲ. ಶಿರಾದಲ್ಲಿ ವಿಮಾನ ನಿಲ್ದಾಣ ಮಾಡಿದರೆ ಶಿವಮೊಗ್ಗ, ವಿಜಯಪುರದಲ್ಲಿ ಇರುವಂತೆ ಅದೇನಿದ್ದರೂ ಜಿಲ್ಲಾ ಮಟ್ಟದ್ದಾಗುತ್ತದೆ ಅಷ್ಟೆ. ಬೆಂಗಳೂರಿನ ಜನರಿಗೆ ಅನುಕೂಲ ಆಗಬೇಕಾದರೆ ಅದು ಬೆಂಗಳೂರಿಗೆ ಸನಿಹದಲ್ಲೇ ಇರಬೇಕು. ಆಗ ಮಾತ್ರ ಹೂಡಿಕೆದಾರ ಸಂಸ್ಥೆಗಳು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬರುತ್ತಾರೆ. ಇಲ್ಲದಿದ್ಧರೆ ಯೋಜನೆಯೇ ಕಾರ್ಯಸಾಧುವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.