ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಅತ್ತಿಬೆಲೆ ಪಟಾಕಿ ಗೋಡೌನ್ ನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.
ತಡರಾತ್ರಿ ಶೋಧ ಕಾರ್ಯಚರಣೆ ವೇಳೆ ಮತ್ತೊಬ್ಬ ಕಾರ್ಮಿಕನ ಮೃತದೇಹ ಪತ್ತೆಯಾಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಸರ್ಕಾರದಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ.
ಬಾಲಾಜಿ ಪಟಾಕಿ ಅಂಗಡಿ ಮಾಲೀಕ ರಾಮಸ್ವಾಮಿ ರೆಡ್ಡಿ, ಜಾಗದ ಮಾಲೀಕ ಅನಿಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಅಗ್ನಿ ದುರಂತದಲ್ಲಿ ಮೃತದೇಹಗಳು ಸುಟ್ಟು ಕರಕಲಾಗಿವೆ. ಇನ್ನು ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪಡೆದುಕೊಂಡಿದ್ದಾರೆ.
ಬೆಂಗಳೂರು ನಗರ ಜಿಲ್ಲೆ ಆನೇಕಲ್ ಸಮೀಪ ಅತ್ತಿಬೆಲೆಯ ಪಟಾಕಿ ಸಂಗ್ರಹ ಮಳಿಗೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 12 ಮಂದಿ ಮೃತಪಟ್ಟ ಸುದ್ದಿ ತಿಳಿದು ಅತೀವ ನೋವಾಯಿತು. ದುರ್ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದೇನೆ. ಮೃತ ಕಾರ್ಮಿಕರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಸಿಎಂ ತಿಳಿಸಿದ್ದಾರೆ.