ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಧ್ಯಾಹ್ನದವರೆಗೂ ಬಿಡುವು ಪಡೆದಿದ್ದ ಮಳೆರಾಯ ಸಂಜೆಯಾಗುತ್ತಿದ್ದಂತೆ ಮತ್ತೆ ಅಬ್ಬರಿಸತೊಡಗಿದ್ದಾನೆ. ಬೆಂಗಳೂರಿನಾಧ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಬೆಂಗಳೂರಿನ ಹಲವೆಡೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ ಮಲ್ಲೇಶ್ವರಂ ಭಾಗದಲ್ಲಿ ಆಲಿಕಲ್ಲು ಮಳೆಯಾಗುತ್ತಿದೆ. ಈ ನಡುವೆ ಮುಂದಿನ ಮೂರು ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇನ್ನಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಆನೇಕಲ್ ಭಾಗದಲ್ಲಿ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ಬೆಂಗಳೂರಿನಲ್ಲಿ ನಾಳೆಯೂ ಅತಿ ಹೆಚ್ಚು ಮಳೆಯಾಗಲಿದ್ದು, ಗುರುವಾರದವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.