ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೊರಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಬೆಳಿಗ್ಗೆಯಿಂದ ಮೋಡಕವಿದ ವಾತಾವರಣ ಆಗಾಗ ಮಳೆ ನಡುವೆ ಮಧ್ಯಾಹ್ನದ ಬಳಿಕ ಗುಡುಗು ಸಹಿತ ಭಾರಿ ಮಳೆರಾಯ ಅಪ್ಪಳಿಸಿದ್ದಾನೆ. ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ.
ವಿಧಾನಸೌಧ ಸುತ್ತಮುತ್ತ, ಕಾರ್ಪೊರೇಶನ್, ಮೆಜೆಸ್ಟಿಕ್, ಕೋರಮಂಗಲ, ಆಡುಗೋಡಿ, ಮಡಿವಾಳ, ಬನ್ನೇರುಘಟ್ಟ ರಸ್ತೆ, ಮೈಸೂರು ರಸ್ತೆ, ಆರ್.ಆರ್.ನಗರ, ಶಾಂತಿನಗರ, ನಾಯಂಡಹಳ್ಳಿ, ರಿಚ್ ಮಂಡ್ ಸರ್ಕಲ್, ಕೆ.ಆರ್ ಸರ್ಕಲ್ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ವಿಧಾನಸೌಧ ಸುತ್ತಮುತ್ತ ಟ್ರಾಫಿಕ್ ಜಾಮ್ ಸಂಭವಿಸಿದ್ದು, ದ್ವಿಚಕ್ರವಾಹನ ಸವಾರರು ಪರದಾಡುವಂತಾಗಿದೆ. ಮಳೆ ಆರ್ಭಟಕ್ಕೆ ರಸ್ತೆಗಳು ಜಲಾವೃತಗೊಂಡಿದ್ದು, ಹಲವೆಡೆ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇನ್ನು ಹಲವೆಡೆ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.
ಬೆಂಗಳೂರು ನಗರ ಮಾತ್ರವಲ್ಲ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಐದು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.